ಚಿತ್ರದುರ್ಗ: ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಚಿತ್ರದುರ್ಗದ ಗಾರೇಹಟ್ಟಿ ಗ್ರಾಮದಲ್ಲಿ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಥಿಲಾವಸ್ಥೆಯಲ್ಲಿದೆ. ಹಂಚುಗಳು ಬಿದ್ದಿವೆ, ಕೊಠಡಿಗಳು ಸೋರುತ್ತಿವೆ. 56 ವಿದ್ಯಾರ್ಥಿಗಳು ಅಪಾಯಕಾರಿ ಪರಿಸ್ಥಿತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ಶೀಘ್ರದಲ್ಲಿ ಸರ್ಕಾರಿ ಶಾಲೆಗೆ ಸುಸಜ್ಜಿತ ಕಟ್ಟಡ ಮತ್ತು ಮೂಲ ಸೌಕರ್ಯ ನೀಡಬೇಕಿದೆ.
ಚಿತ್ರದುರ್ಗ, ಜುಲೈ 10: ಚಿತ್ರದುರ್ಗ (Chitradurga) ನಗರ ಬಳಿಯ ಗಾರೇಹಟ್ಟಿ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (Government Higher Primary School) ಈಗ ಶಿಥಿಲಾವಸ್ಥೆಗೆ ತಲುಪಿದೆ. ಹಂಚುಗಳು ಬಿದ್ದಿದ್ದು, ತಾಡಪಲ್ ಹಾಕಲಾಗಿದೆ. ಪ್ರತಿ ಕೊಠಡಿಯೂ ಸೋರುತ್ತದೆ. ಏಳನೇ ತರಗತಿವರೆಗಿನ ಈ ಶಾಲೆಯಲ್ಲಿ 56ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಶಾಲೆಗೆ ಸುಸಜ್ಜಿತ ಕಟ್ಟಡ ಇಲ್ಲ. ಮತ್ತು ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಇಲ್ಲ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಆರೋಪಿಸಿದ್ದಾರೆ.
ಈ ಬಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಿ ಮಾತನಾಡಿ, ಈಗಾಗಲೇ ಶಾಲಾ ಕಟ್ಟಡ ದುರಸ್ಥಿ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಬಿಇಓ ಮತ್ತು ಡಿಡಿಪಿಐ ಅವರು ಪರಿಶೀಲನೆ ನಡೆಸಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ 1937ರಲ್ಲಿ ನಿರ್ಮಾಣವಾದ ಕಟ್ಟಡ ಈವರೆಗೆ ರಿಪೇರಿ ಕಂಡಿಲ್ಲ. ಹೀಗಾಗಿ, ಕೆಎಮ್ಇಆರ್ಸಿ ಯೋಜನೆ ಅಡಿ 19ಲಕ್ಷ ರೂ. ಅನುದಾನದಲ್ಲಿ ದುರಸ್ಥಿಗೆ ಕ್ರಮ ಕೈಗೊಳ್ಳಲಾಗಿದೆ. ಶೀಘ್ರ ಕಟ್ಟಡ ದುರಸ್ಥಿ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.
ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ಗಾರೇಹಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಸ್ಥಿತಿ ಶೋಚನೀಯವಾಗಿದೆ. ಹೀಗಾಗಿ, ಇನ್ನಾದರು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಸರ್ಕಾರ ಈ ಬಗ್ಗೆ ಗಮನಹರಿಸಬೇಕಿದೆ. ಶೀಘ್ರದಲ್ಲಿ ಸರ್ಕಾರಿ ಶಾಲೆಗೆ ಸುಸಜ್ಜಿತ ಕಟ್ಟಡ ಮತ್ತು ಮೂಲ ಸೌಕರ್ಯ ನೀಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ