ಸಿಜೆ ರಾಯ್ ಸಾವು ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ: ಸಿಐಡಿ ತನಿಖೆ ಸಾಧ್ಯತೆ
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಅಶೋಕನಗರ ಪೊಲೀಸರು ತೀವ್ರಗೊಳಿಸಿದ್ದಾರೆ. ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಗಳು ಮೂಡಿವೆ. ಸರಕಾರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ವಿದೇಶದಿಂದ ಆಗಮಿಸಿದ ಕುಟುಂಬಸ್ಥರು ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹ ವೀಕ್ಷಿಸಿ ಭಾವುಕರಾಗಿದ್ದಾರೆ.
ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಬೆಂಗಳೂರಿನ ಅಶೋಕನಗರ ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಐಟಿ ದಾಳಿಗೆ ಹೆದರಿ ನಡೆಸಿದ ಕೃತ್ಯವೇ ಎಂಬ ಪ್ರಶ್ನೆ ಮೂಡಿದೆ.
ಸರಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರು ಕಮಿಷನರ್ರಿಂದ ಮಾಹಿತಿ ಪಡೆದಿದ್ದಾರೆ. ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವ ಸಾಧ್ಯತೆಯಿದೆ. ಸಾವಿರಾರು ಕೋಟಿ ಮೌಲ್ಯದ ಉದ್ಯಮ ಸಾಮ್ರಾಜ್ಯವನ್ನು ಹೊಂದಿದ್ದ ರಾಯ್ ಅವರ ಈ ಹಠಾತ್ ನಿಧನಕ್ಕೆ ಕಾರಣ ಏನೆಂದು ಸ್ಪಷ್ಟವಾಗಿಲ್ಲ. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.
ವಿದೇಶದಲ್ಲಿದ್ದ ರಾಯ್ ಅವರ ಪತ್ನಿ ಮತ್ತು ಮಕ್ಕಳು ಬೆಂಗಳೂರಿಗೆ ಆಗಮಿಸಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹ ವೀಕ್ಷಿಸಿ ದುಃಖಿತರಾಗಿದ್ದಾರೆ. ರ್ಜಾಪುರದಲ್ಲಿರುವ ತೋಟದಲ್ಲಿ ಭಾನುವಾರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ. ಪ್ರಸ್ತುತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

