ಸಿಜೆ ರಾಯ್ ಸಾವು ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ: ಸಿಐಡಿ ತನಿಖೆ ಸಾಧ್ಯತೆ

Updated on: Jan 31, 2026 | 7:25 AM

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಅಶೋಕನಗರ ಪೊಲೀಸರು ತೀವ್ರಗೊಳಿಸಿದ್ದಾರೆ. ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಗಳು ಮೂಡಿವೆ. ಸರಕಾರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ವಿದೇಶದಿಂದ ಆಗಮಿಸಿದ ಕುಟುಂಬಸ್ಥರು ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹ ವೀಕ್ಷಿಸಿ ಭಾವುಕರಾಗಿದ್ದಾರೆ.

ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಬೆಂಗಳೂರಿನ ಅಶೋಕನಗರ ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಐಟಿ ದಾಳಿಗೆ ಹೆದರಿ ನಡೆಸಿದ ಕೃತ್ಯವೇ ಎಂಬ ಪ್ರಶ್ನೆ ಮೂಡಿದೆ.

ಸರಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರು ಕಮಿಷನರ್​ರಿಂದ ಮಾಹಿತಿ ಪಡೆದಿದ್ದಾರೆ. ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವ ಸಾಧ್ಯತೆಯಿದೆ. ಸಾವಿರಾರು ಕೋಟಿ ಮೌಲ್ಯದ ಉದ್ಯಮ ಸಾಮ್ರಾಜ್ಯವನ್ನು ಹೊಂದಿದ್ದ ರಾಯ್ ಅವರ ಈ ಹಠಾತ್ ನಿಧನಕ್ಕೆ ಕಾರಣ ಏನೆಂದು ಸ್ಪಷ್ಟವಾಗಿಲ್ಲ. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.

ವಿದೇಶದಲ್ಲಿದ್ದ ರಾಯ್ ಅವರ ಪತ್ನಿ ಮತ್ತು ಮಕ್ಕಳು ಬೆಂಗಳೂರಿಗೆ ಆಗಮಿಸಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹ ವೀಕ್ಷಿಸಿ ದುಃಖಿತರಾಗಿದ್ದಾರೆ. ರ್ಜಾಪುರದಲ್ಲಿರುವ ತೋಟದಲ್ಲಿ ಭಾನುವಾರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ. ಪ್ರಸ್ತುತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More