ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ, ದರ್ಶನ್ ಮೇಲೆ ರೌಡಿಶೀಟರ್? ಗೃಹ ಸಚಿವರು ಹೇಳಿದ್ದೇನು ನೋಡಿ
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಶಾಮೀಲಾಗಿದ್ದಾರೆ ಎಂಬ ಆರೋಪದ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ ಎಂದಿದ್ದಾರೆ. ಪ್ರಕರಣ ಸಿಬಿಐಗೆ ವಹಿಸುವುದಿಲ್ಲ ಎಂದ ಅವರು, ರೇಣುಕಾಸ್ವಾಮಿ ಕುಟುಂಬಗ್ಗೆ ಪರಿಹಾರ ನೀಡುವ ಬಗ್ಗೆ ಮತ್ತು ದರ್ಶನ್ ವಿರುದ್ಧದ ಕ್ರಮಕ್ಕೆ ಸಂಬಂಧಿಸಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಆ ಕುರಿತ ವಿಡಿಯೋ ಇಲ್ಲಿದೆ.
ಬೆಂಗಳೂರು, ಜೂನ್ 12: ನಟ ದರ್ಶನ್ (Darshan) ಹಾಗೂ ಇತರರ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ (Renukaswamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು. ಕಾನೂನು ಎಲ್ಲರಿಗೂ ಒಂದೇ. ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ದರ್ಶನ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನುನನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ಅವರು ಹೇಳಿದರು.
ದರ್ಶನ್ ಗೆಳತಿ ಬಗ್ಗೆ ರೇಣುಕಾ ಸ್ವಾಮಿ ಪೋಸ್ಟ್ ಮಾಡಿದ್ದ ಎಂಬ ಆರೋಪವಿದೆ. ಹಾಗೆ ಮಾಡಿದ್ದರೆ ಬಗ್ಗೆ ದೂರು ನೀಡಬಹುದಿತ್ತು. ದೂರು ನೀಡಿದ್ದರೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದರು. ರೇಣುಕಾಸ್ವಾಮಿಯನ್ನು ಕರೆತಂದು ಕೊಲೆ ಮಾಡಿದ ಬಗ್ಗೆ ಆರೋಪ ಇದೆ. ಹೀಗಾಗಿ ಪೊಲೀಸರು ತನಿಖೆ ಮಾಡ್ತಿದ್ದಾರೆ. ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ನೀಡಲು ಆಗುವುದಿಲ್ಲ. ಪ್ರಕರಣದ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡಲ್ಲ. ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ. ಕಾನೂನಿನ ಪ್ರಕಾರ ಪೊಲೀಸರು ಕ್ರಮಕೈಗೊಳ್ಳುತ್ತಾರೆ ಎಂದು ಗೃಹ ಸಚಿವರು ಹೇಳಿದರು.
ಇದನ್ನೂ ಓದಿ: ದರ್ಶನ್ ಪ್ರಕರಣ: ರೇಣುಕಾ ಸ್ವಾಮಿ ಶವ ಸಾಗಿಸಿದ್ದ ಕಾರು ವಶ, ಯಾರ ಹೆಸರಲ್ಲಿದೆ ಕಾರು?
ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರ ತನಿಖಾ ವರದಿ ಕೈಸೇರಿದ ನಂತರ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ