ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಂದೆ ಡಿಕೆ ಶಿವಕುಮಾರ್ ತಂಡ ಪರೇಡ್: ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಆಪ್ತರ ಡಿನ್ನರ್!
ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತ ಗೊಂದಲ ತಾರಕಕ್ಕೇರಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಶಾಸಕರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರೆ, ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಣದ ನಾಯಕರು ಡಿನ್ನರ್ ಸಭೆ ನಡೆಸಿದ್ದಾರೆ. ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ನವೆಂಬರ್ ಕ್ರಾಂತಿ ಸಮೀಪಿಸಿತಾ ಎಂಬ ಅನುಮಾನ ಹುಟ್ಟುಹಾಕಿದೆ.
ಬೆಂಗಳೂರು, ನವೆಂಬರ್ 21: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಣ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ತೀವ್ರಗೊಂಡಿದ್ದು, ನವೆಂಬರ್ ಕ್ರಾಂತಿಯ ಕುತೂಹಲ ಹೆಚ್ಚಿಸಿದೆ. ದೆಹಲಿಯಲ್ಲಿ ಡಿಕೆ ಶಿವಕುಮಾರ್ ಆಪ್ತ ಶಾಸಕರ ತಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರೆ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಆಪ್ತ ಸಚಿವರು ಮತ್ತು ಶಾಸಕರು ಗೃಹ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ.
ಡಿನ್ನರ್ ಮೀಟಿಂಗ್ನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ, ಸಚಿವರಾದ ಎಚ್.ಸಿ. ಮಹದೇವಪ್ಪ, ದಿನೇಶ್ ಗುಂಡೂರಾವ್, ಮುನಿಯಪ್ಪ, ವೆಂಕಟೇಶ್, ಮಾಜಿ ಸಚಿವ ರಾಜಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅಧಿಕಾರ ಉಳಿಸಿಕೊಳ್ಳುವ ಮತ್ತು ಅಧಿಕಾರ ಪಡೆಯುವ ರಾಜಕಾರಣದ ಬಗ್ಗೆ ರಾಜಣ್ಣ ಪರೋಕ್ಷವಾಗಿ ಮಾತನಾಡಿದ್ದಾರೆ. ಇವೆಲ್ಲ ಬೆಳವಣಿಗೆಗಳ ನಡುವೆ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಇಂದು ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬರಲಿದ್ದು, ಕುತೂಹಲ ಮೂಡಿಸಿದೆ.

