ಚಳಿಗಾಲದ ಅಧಿವೇಶನದ ಮಧ್ಯೆಯೂ ಕಾಂಗ್ರೆಸ್ನಲ್ಲಿ ಡಿನ್ನರ್ ಪಾಲಿಟಿಕ್ಸ್: ಫಿರೋಜ್ ಸೇಠ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರ ಸಭೆ
ಬೆಳಗಾವಿ ಚಳಿಗಾಲದ ಅಧಿವೇಶನದ ನಡುವೆಯೇ ಮಾಜಿ ಶಾಸಕ ಫಿರೋಜ್ ಸೇಠ್ ಮನೆಯಲ್ಲಿ ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ನಡೆದಿದೆ. ಸಿಎಂ ಸಿದ್ದರಾಮಯ್ಯ ಆಪ್ತರು ಮತ್ತು ಅಲ್ಪಸಂಖ್ಯಾತ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಗೈರು ಹಾಜರಿ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯನವರೇ ನಮ್ಮ ನಾಯಕರು ಎಂದು ಅಲ್ಪಸಂಖ್ಯಾತ ನಾಯಕರು ಸಭೆಯಲ್ಲಿ ಹೇಳಿದ್ದಾರೆ.
ಬೆಳಗಾವಿ, ಡಿಸೆಂಬರ್ 11: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ಡಿನ್ನರ್ ಪಾಲಿಟಿಕ್ಸ್ ಮುಂದುವರಿದಿದೆ. ಮಾಜಿ ಶಾಸಕ ಫಿರೋಜ್ ಸೇಠ್ ಅವರ ನಿವಾಸದಲ್ಲಿ ಬುಧವಾರ ರಾತ್ರಿ ನಡೆದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದಾರೆ. ಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಮಹದೇವಪ್ಪ, ಭೈರತಿ ಸುರೇಶ್, ಸತೀಶ್ ಜಾರಕಿಹೊಳಿ ಹಾಗೂ ಶಾಸಕರಾದ ಕನೀಜ್ ಫಾತಿಮಾ, ಪ್ರಸಾದ್ ಅಬ್ಬಯ್ಯ, ಆಸಿಫ್ ಸೇಠ್, ಅಶೋಕ್ ಪಟ್ಟಣ್, ರಿಜ್ವಾನ್ ಅರ್ಷದ್, ಎಂಎಲ್ಸಿ ಸಲೀಂ ಅಹಮದ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.
ಈ ಡಿನ್ನರ್ ಮೀಟಿಂಗ್‌ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಆಹ್ವಾನ ನೀಡಲಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಅವರು ಭಾಗವಹಿಸಲಿಲ್ಲ ಎಂದು ಫಿರೋಜ್ ಸೇಠ್ ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ಬಣದ ಯಾವ ನಾಯಕರೂ ಸಭೆಯಲ್ಲಿ ಕಾಣಿಸಿಕೊಳ್ಳದಿರುವುದು ಪಕ್ಷದೊಳಗಿನ ಗುಂಪುಗಾರಿಕೆಯ ಕುರಿತು ಮತ್ತೆ ಚರ್ಚೆ ಹುಟ್ಟುಹಾಕಿದೆ. ಅಲ್ಪಸಂಖ್ಯಾತ ನಾಯಕರು ಸಿದ್ದರಾಮಯ್ಯನವರೇ ನಮ್ಮ ನಾಯಕರು ಎಂದು ಸ್ಪಷ್ಟಪಡಿಸಿ, ಮುಂದಿನ ರಾಜಕೀಯ ನಡೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
