ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು, ಆಗ್ತಾರೆ: ಮತ್ತೆ ಸಿಎಂ ಬದಲಾವಣೆಯ ಮಾತನಾಡಿದ ಇಕ್ಬಾಲ್ ಹುಸೇನ್
ನಾಯಕತ್ವ ಬದಲಾವಣೆ ವಿಚಾರವಾಗಿ ನಡೆಯುತ್ತಿರುವ ಚರ್ಚೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಬಣದ ಸಚಿವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಆಗ್ರಹಿಸಿದ ಸಂದರ್ಭದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಬಣದ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಸಿಎಂ ಬದಲಾವಣೆ ಮಾತುಗಳನ್ನಾಡಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬುದೇ ತಮ್ಮ ಆಸೆ ಎಂದು ಅವರು ಹೇಳಿದ್ದಾರೆ.
ಕೊಪ್ಪಳ, ಅಕ್ಟೋಬರ್ 9: ‘ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬುದೇ ನನ್ನ ಅಭಿಲಾಷೆ. ಅವರು ಮುಖ್ಯಮಂತ್ರಿಯಾಗಲಿದ್ದಾರೆ. ನನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಹೈಕಮಾಂಡ್ಗೂ ತಿಳಿಸಿದ್ದೇನೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಿಸ್ತಿನ ಪಕ್ಷ, ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಎಲ್ಲರೂ ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ನನ್ನ ಅನಿಸಿಕೆ, ಅಭಿಲಾಷೆಯನ್ನು ಹೈಕಮಾಂಡ್ ಬಳಿ ಸ್ಪಷ್ಟವಾಗಿ ಹೇಳಿದ್ದೇನೆ. ಇದಕ್ಕೆ ನಾನು ಬದ್ಧನಾಗಿದ್ದೇನೆ, ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಈ ಹಿಂದೆ, ಕಾಂಗ್ರೆಸ್ ಶಾಸಕರ ಗೊಂದಲ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಬೆಂಗಳೂರಿಗೆ ಆಗಮಿಸಿ ಸಭೆ ನಡೆಸುತ್ತಿದ್ದ ಸಂದರ್ಭದಲ್ಲೇ ಇಕ್ಬಾಲ್ ಹುಸೇನ್ ನಾಯಕತ್ವ ಬದಲಾವಣೆ ಮಾತುಗಳನ್ನಾಡಿದ್ದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದಿದ್ದರು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ನೋಟಿಸ್ ಕೂಡ ನೀಡಿದ್ದರು. ಇದೀಗ ಇಕ್ಬಾಲ್ ಹುಸೇನ್ ಮತ್ತೆ ಸಿಎಂ ಬದಲಾವಣೆ ಮಾತುಗಳನ್ನಾಡಿದ್ದಾರೆ.
