ನರೇಗಾ ಹೆಸರು ಬದಲಾವಣೆ ವಿರೋಧಿಸಿ ನಾಳೆ ಕಾಂಗ್ರೆಸ್ನಿಂದ ರಾಜಭವನ ಚಲೋ: ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಫ್ರೀಡಂಪಾರ್ಕ್ನಿಂದ ರಾಜಭವನ ಚಲೋ ಕಾರ್ಯಕ್ರಮ ಘೋಷಿಸಿದ್ದಾರೆ. ನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಜನವಿರೋಧಿ ಕಾನೂನನ್ನು ಖಂಡಿಸಿ ಕಾಂಗ್ರೆಸ್ ಈ ಹೋರಾಟ ಆಯೋಜಿಸಿದೆ. ಪಕ್ಷದ ಶಾಸಕರು, ಕಾರ್ಯಕರ್ತರು ರಾಜ್ಯಾದ್ಯಂತ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಾತ್ಮ ಗಾಂಧೀಜಿ ರೂಪಿಸಿದ ಉದ್ಯೋಗ ಖಾತ್ರಿ ಯೋಜನೆಯನ್ನು ಮರು ಜಾರಿಗೊಳಿಸಲು ಇದು ಕರೆ ನೀಡುತ್ತದೆ.
ಬೆಂಗಳೂರು, ಜನವರಿ 26: ನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ರಾಜಭವನ ಚಲೋ ಕಾರ್ಯಕ್ರಮದ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ಫ್ರೀಡಂಪಾರ್ಕ್ನಿಂದ ರಾಜಭವನದತ್ತ ನಡೆಯುವ ಈ ಪ್ರತಿಭಟನೆಗೆ ರಾಜ್ಯಾದ್ಯಂತ ಎಲ್ಲ ಶಾಸಕರು, ಎಂಎಲ್ಸಿಗಳು ಹಾಗೂ ನರೇಗಾ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
ಈ ಕಾರ್ಯಕ್ರಮದ ಜತೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಪ್ರತಿ ಕ್ಷೇತ್ರದಲ್ಲೂ ಕನಿಷ್ಠ 5 ಕಿಲೋಮೀಟರ್ ಪಾದಯಾತ್ರೆ ನಡೆಸುವಂತೆ ಸೂಚಿಸಲಾಗಿದೆ. ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ಸೋನಿಯಾ ಗಾಂಧಿ ನೇತೃತ್ವದ ಮನಮೋಹನ್ ಸಿಂಗ್ ಸರ್ಕಾರ ಜಾರಿಗೊಳಿಸಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಮತ್ತೆ ಅನುಷ್ಠಾನಕ್ಕೆ ತರುವುದು ಈ ಹೋರಾಟದ ಮುಖ್ಯ ಉದ್ದೇಶವಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಪ್ರತಿ ವರ್ಷ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಮಾರು 6 ಸಾವಿರ ಕೋಟಿ ರೂಪಾಯಿಗಳ ಕೆಲಸ ನಡೆಯುತ್ತಿತ್ತು. ಇದನ್ನು ನಿಲ್ಲಿಸಲು ಹೊಸ ಕಾನೂನು ತರಲಾಗಿದೆ ಎಂದು ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಜನವಿರೋಧಿ, ಗ್ರಾಮೀಣ ಅಭಿವೃದ್ಧಿ ವಿರೋಧಿ ಮತ್ತು ಬಡವರ ವಿರೋಧಿ ನೀತಿ ಎಂದು ಅವರು ಖಂಡಿಸಿದ್ದಾರೆ.
