ದೆಹಲಿಯಲ್ಲಿ ನಿನ್ನೆ ನಡೆದ ವಿದ್ಯಮಾನಗಳು ರಾಜ್ಯದಲ್ಲಿ ಹೊಸ ರಾಜಕೀಯ ಸನ್ನಿವೇಶಕ್ಕೆ ನಾಂದಿಯಾಗಿವೆ: ಕೆಎಸ್ ಈಶ್ವರಪ್ಪ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವಾಗಲೀ ಅಥವಾ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯಾಗಲೀ ಸ್ಪರ್ಧಿಸುವುದಿಲ್ಲ, ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಓಡಾಡಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಮಾಡಲು ನೆರವಾಗುವುದೇ ತಮ್ಮ ಗುರಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿರುವುದು ಮೈತ್ರಿಯ ಬಗ್ಗೆ ಅವರಿಗಿರುವ ಬದ್ಧತೆ ತೋರುತ್ತದೆ ಎಂದು ಈಶ್ವರಪ್ಪ ಹೇಳಿದರು.
ಬಾಗಲಕೋಟೆ: ಗುರುವಾರದಂದು ಜೆಡಿಎಸ್ ಮತ್ತು ಬಿಜೆಪಿ ನಾಯಕರು ದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿದ್ದು ರಾಜ್ಯ ರಾಜಕಾರಣದಲ್ಲಿ ಒಂದು ಹೊಸ ತಿರುವು ಸೃಷ್ಟಿಯಾಗಲು ನಾಂದಿಯಾಗಿದೆ ಎಂದು ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ನಿನ್ನೆಯ ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು ಭೇಟಿಯಾಗಿದ್ದಾರೆ. ಹಾಗೆಯೇ, ಜೆಡಿಎಸ್ ಪಕ್ಷದ ಪ್ರಮುಖರಾದ ಹೆಚ್ ಡಿ ದೇವೇಗೌಡ, ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೋಗಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣಕ್ಕೆ ಶುಭಸೂಚಕ ಎಂದು ಈಶ್ವರಪ್ಪ ಹೇಳಿದರು.
ಭೇಟಿಯ ಬಳಿಕ ಮಾತಾಡಿದ ವಿಜೆಯೇಂದ್ರ, ರಾಜ್ಯದ ಎಲ್ಲ ಹಿರಿಯ ಮತ್ತು ಕಿರಿಯ ನಾಯಕರನ್ನು ಜೊತೆಗೂಡಿಸಿಕೊಂಡು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮಂತ್ರವನ್ನು ಪ್ರಧಾನಿ ಮೋದಿ ಮತ್ತು ನಡ್ಡಾ ಅವರು ತನಗೆ ನೀಡಿದ್ದಾರೆ ಎಂದಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ