ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್: ಡಿಕೆ ಶಿವಕುಮಾರ್ ಗುಡ್ ನ್ಯೂಸ್

Updated By: Ganapathi Sharma

Updated on: Dec 10, 2025 | 12:05 PM

ಬೆಂಗಳೂರಿನಲ್ಲಿ ಐಪಿಎಲ್ ಮತ್ತು ಇತರೆ ಕ್ರಿಕೆಟ್ ಪಂದ್ಯಗಳ ಆಯೋಜನೆ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (KSCA) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ತಂಡ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದೆ. ಪಂದ್ಯಗಳಿಗೆ ಅನುಮತಿ ಕೋರಲಾಗಿದ್ದು, ನಾಳೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಕೆಶಿ ತಿಳಿಸಿದ್ದಾರೆ.

ಬೆಳಗಾವಿ, ಡಿಸೆಂಬರ್ 10: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಇತರೆ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (KSCA) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ತಂಡದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬೆಳಗಾವಿಯಲ್ಲಿ ಬುಧವಾರ ಭೇಟಿ ಮಾಡಿ, ಪಂದ್ಯಗಳ ಆಯೋಜನೆಗೆ ಸಹಕಾರ ಮತ್ತು ಅನುಮತಿ ಕೋರಿದ್ದಾರೆ. ನಂತರ ಮಾತನಾಡಿದ ಡಿಕೆ ಶಿವಕುಮಾರ್, ವೆಂಕಟೇಶ್ ಪ್ರಸಾದ್ ಹಾಗೂ ತಂಡಕ್ಕೆ ಸರ್ಕಾರ ಅಭಿನಂದನೆ ಸಲ್ಲಿಸಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆ ಕುರಿತು, ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಆದರೆ, ಜನಸಂದಣಿ ನಿರ್ವಹಣೆ ಮತ್ತು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿಯ ಶಿಫಾರಸುಗಳನ್ನು ಪಾಲಿಸುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ವೆಂಕಟೇಶ್ ಪ್ರಸಾದ್ ತಂಡವು ಮೈಕೆಲ್ ಕುನ್ಹಾ ಸಮಿತಿ ವರದಿಯನ್ನು ಪಾಲಿಸುವುದಾಗಿ ಭರವಸೆ ನೀಡಿದೆ. ಬೆಂಗಳೂರಿನಿಂದ ಯಾವುದೇ ಪಂದ್ಯಗಳನ್ನು ಹೊರಗೆ ಕಳುಹಿಸುವ ಇಚ್ಛೆ ಸರ್ಕಾರಕ್ಕಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ