KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸಗಳ ಮೇಲೆ ಇಡಿ ದಾಳಿ: ಸತತ 22 ಗಂಟೆಗಳಿಂದ ನಡೆಯುತ್ತಿರುವ ಪರಿಶೀಲನೆ

Updated on: Aug 19, 2026 | 9:06 AM

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ನಿವಾಸ ಸೇರಿದಂತೆ 21 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ಇಂದೂ ಸಹ ಮುಂದುವರಿದಿದೆ. ಪಶುವೈದ್ಯಕೀಯ ನೇಮಕಾತಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಭಾರಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳ ಕುರಿತು ಇಡಿ ಅಧಿಕಾರಿಗಳು ಸತತ 22 ಗಂಟೆಗಳಿಂದ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು, ಆಗಸ್ಟ್ 19: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿ, ಶೋಧ ಕಾರ್ಯ ಬುಧವಾರವೂ ಮುಂದುವರಿದಿದೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸ ಸೇರಿದಂತೆ ಒಟ್ಟು 21 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ತನಿಖೆಯು ಸತತ 22 ಗಂಟೆಗಳಿಂದ ನಡೆಯುತ್ತಿದ್ದು, ತಡರಾತ್ರಿಯೂ ಅಧಿಕಾರಿಗಳು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಶಿವಶಂಕರಪ್ಪ ಸಾಹುಕಾರ್‌ ವಿರುದ್ಧ ಕೆಪಿಎಸ್‌ಸಿ ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಯ ಆರೋಪಗಳಿವೆ. ನಿರ್ದಿಷ್ಟವಾಗಿ ಪಶುವೈದ್ಯಕೀಯ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಇಡಿ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂಬ ಸಂಶಯದ ಮೇಲೆ ಇಡಿ ಪ್ರಕರಣ ದಾಖಲಿಸಿಕೊಂಡಿದೆ. ಪ್ರತಿ ನೇಮಕಾತಿಗೆ 80 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪವೂ ಇದೆ.

ದಾಳಿಯ ವೇಳೆ, ಶಿವಶಂಕರಪ್ಪ ಅವರ ಮನೆಯಲ್ಲಿರುವ ದಾಖಲೆಗಳು, ಬ್ಯಾಂಕ್ ಖಾತೆಗಳು ಮತ್ತು ಇತರೆ ಸಂಬಂಧಪಟ್ಟ ವಿವರಗಳನ್ನು ಇಡಿ ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಈ ಶೋಧ ಕಾರ್ಯಾಚರಣೆ ಮುಂದುವರೆಯುವ ಸಾಧ್ಯತೆ ಇದೆ. ಈ ಹಿಂದೆ ಸಿಐಡಿ ಕೂಡ ಕೆಪಿಎಸ್‌ಸಿ ಹಗರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದು, ಈಗ ಇಡಿ ಪ್ರವೇಶದಿಂದ ತನಿಖೆ ಮತ್ತಷ್ಟು ತೀವ್ರಗೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More