VIDEO: ನಮ್ಮ ಕ್ಯಾಪ್ಟನ್ಸ್ ಬಾಯಲ್ಲಿ ‘ನಮ್ದು’ ಕನ್ನಡ
IPL 2025 Final RCB vs PBKS: ಐಪಿಎಲ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ 190 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 184 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ರೋಚಕ ಜಯದೊಂದಿಗೆ ಆರ್ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಅವಿಸ್ಮರಣೀಯ ಕ್ಷಣಗಳೊಂದಿಗೆ ಅಂತ್ಯಗೊಂಡಿದೆ. ಹೀಗೆ ಅವಿಸ್ಮರಣೀಯ ಕ್ಷಣಗಳನ್ನು ಸೃಷ್ಟಿಸಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಈ ಬಾರಿಯ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದ ಆರ್ಸಿಬಿ ಪಡೆ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.
ಅಹಮದಾಬಾದ್ನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 190 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 184 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಆರ್ಸಿಬಿ ತಂಡವು 6 ರನ್ಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
ಈ ಗೆಲುವಿನ ಬಳಿಕ ಮಾತನಾಡಿದ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ಈ ಸಲ ಕಪ್ ನಮ್ದು ಎನ್ನುವ ಮೂಲಕ ಅಭಿಮಾನಿಗಳ ಹೃದಯ ಗೆದ್ದರು. ಇದಕ್ಕೂ ಮುನ್ನ 2024 ರಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಕೂಡ ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು ಎನ್ನುವ ಮೂಲಕ ಗಮನ ಸೆಳೆದಿದ್ದರು. ಇದೀಗ ರಜತ್ ಪಾಟಿದಾರ್ ಕೂಡ ಅದನ್ನೇ ಪುನರಾವರ್ತಿಸುವ ಮೂಲಕ ಆರ್ಸಿಬಿ ಅಭಿಮಾನಿಗಳ ಹಾಗೂ ಕನ್ನಡಿಗರ ಹೃದಯ ಗೆದ್ದಿದ್ದಾರೆ.