ಚಿಕ್ಕಮಗಳೂರು: ಮುತ್ತೋಡಿ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷ, ಆತಂಕದಲ್ಲಿ ಗ್ರಾಮಸ್ಥರು
ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಅಂಚಿನ ಮುತ್ತೋಡಿ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು ಜನರು ಆತಂಕಕ್ಕೀಡಾಗಿದ್ದಾರೆ. ಮತ್ತೊಂದೆಡೆ, ಶೃಂಗೇರಿ ತಾಲೂಕಿನ ಕೆರೆಕಟ್ಟೆ, ಶೀರ್ಲು, ಕೆರೆಗದ್ದೆ, ಅಣಲಕ್ಕಿ ಸೇರಿ ಹಲವು ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗುತ್ತಿರುವುದು ಗ್ರಾಮಸ್ಥರ ನಿದ್ದೆಗೆಡಿಸಿದೆ.
ಚಿಕ್ಕಮಗಳೂರು, ಡಿಸೆಂಬರ್ 10: ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಅಂಚಿನಲ್ಲಿ ಮತ್ತೆ ಕಾಡಾನೆಗಳ ಸಂಚಾರ ಹೆಚ್ಚಾಗಿದೆ. ಮುತ್ತೋಡಿ ಬಳಿ ಜನವಸತಿ ಪ್ರದೇಶ ಹಾಗೂ ರಸ್ತೆಗಳಲ್ಲಿ 25ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಓಡಾಡುತ್ತಿರುವುದು ಸ್ಥಳೀಯರಲ್ಲಿ ಭೀತಿಯನ್ನು ಉಂಟುಮಾಡಿದೆ.
ಶೃಂಗೇರಿ ತಾಲೂಕಿನಲ್ಲಿ ಕಾಡಾನೆ ಉಪಟಳ ಹೆಚ್ಚಳ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ, ಶೀರ್ಲು, ಕೆರೆಗದ್ದೆ, ಅಣಲಕ್ಕಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಡಾನೆಗಳ ದಾಳಿಯಿಂದ ಜನಜೀವನ ಸಂಕಷ್ಟಕ್ಕೀಡಾಗಿದೆ. ಭತ್ತ, ಅಡಿಕೆ ಸೇರಿದಂತೆ ಪ್ರಮುಖ ಬೆಳೆಗಳನ್ನು ಕಾಡಾನೆಗಳ ಹಿಂಡು ನಿರಂತರವಾಗಿ ನಾಶ ಪಡಿಸುತ್ತಿದ್ದು, ರೈತರು ಸಂಕಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೆರೆ ಗ್ರಾಮದ ಪಂಚಾಯತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ರೈತ ಮಹಿಳೆಯೊಬ್ಬರು ಬೆಳೆ ನಾಶವಾಗಿರುವ ಬಗ್ಗೆ ಕಣ್ಣೀರು ಹಾಕಿದರು. ಕಳೆದೊಂದು ತಿಂಗಳ ಹಿಂದೆ ಕೆರೆಗದ್ದೆ ಗ್ರಾಮದಲ್ಲಿ ಇಬ್ಬರು ಗ್ರಾಮಸ್ಥರು ಕಾಡಾನೆ ಬಲಿಯಾಗಿದ್ದ ಹಿನ್ನೆಲೆಯಲ್ಲಿ ಈಗ ಗ್ರಾಮಸ್ಥರ ಭಯ ಮತ್ತಷ್ಟು ಹೆಚ್ಚಾಗಿದೆ.
ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿರುವ ಈ ಗ್ರಾಮಗಳಲ್ಲಿ ಕಾಡಾನೆಗಳ ಓಡಾಟ ಹಾಗೂ ಉಪಟಳ ತೀವ್ರವಾಗಿದ್ದು, ಅವುಗಳನ್ನು ಸೆರೆ ಹಿಡಿದು ಸ್ಥಳಾಂತರಿಸುವುದು ಮಾತ್ರ ಪರಿಹಾರ ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಅರಣ್ಯ ಇಲಾಖೆಯು ತುರ್ತು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.