ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ: ಅಡಿಂಜೆಯಲ್ಲಿ ಪ್ರಿಂಟಿಂಗ್ ಮೆಷಿನ್ ಜಪ್ತಿ

Edited By:

Updated on: Jul 16, 2026 | 1:14 PM

ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಬೃಹತ್ ನಕಲಿ ನೋಟು ಮುದ್ರಣ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಏಳು ಆರೋಪಿಗಳನ್ನು ಬಂಧಿಸಲಾಗಿದ್ದು, ನೋಟು ಮುದ್ರಣ ಯಂತ್ರ ಹಾಗೂ ಕಾಗದದ ಬಂಡಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿರ್ಜನ ಪ್ರದೇಶದ ಬಾಡಿಗೆ ಮನೆಯಲ್ಲಿ ಈ ದಂಧೆ ನಡೆಯುತ್ತಿತ್ತು.

ಉಪ್ಪಿನಂಗಡಿ, ಜು.16: ಸಾರ್ವಜನಿಕ ವಲಯ ಹಾಗೂ ಬ್ಯಾಂಕಿಂಗ್ ವ್ಯವಸ್ಥೆಗೆ ದೊಡ್ಡ ತಲೆನೋವಾಗಿದ್ದ ನಕಲಿ ನೋಟು ತಯಾರಿಸುವ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ನಕಲಿ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಸುಧಾರಿತ ಮುದ್ರಣ ಯಂತ್ರಗಳನ್ನು ಜಪ್ತಿ ಮಾಡಿದ್ದಾರಲ್ಲದೆ, ಅಂತರರಾಜ್ಯ ಸಂಪರ್ಕ ಹೊಂದಿದ್ದ ಬರೋಬ್ಬರಿ 7 ಮಂದಿ ಖತರ್ನಾಕ್ ಆರೋಪಿಗಳನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಡಿಂಜೆ ಎಂಬ ನಿರ್ಜನ ಹಾಗೂ ರಹಸ್ಯ ಪ್ರದೇಶದಲ್ಲಿ ಈ ನಕಲಿ ನೋಟು ತಯಾರಿಕೆಯ ಕಪ್ಪು ದಂಧೆ ರಾಜಾರೋಷವಾಗಿ ನಡೆಯುತ್ತಿತ್ತು. ಈ ಅಡ್ಡೆಯ ಕುರಿತು ಉಪ್ಪಿನಂಗಡಿ ಪೊಲೀಸರಿಗೆ ಖಚಿತ ಬಾತ್ಮೀದಾರರಿಂದ ಮಾಹಿತಿ ಸಿಕ್ಕಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸ್ ತಂಡವು ಜಂಟಿಯಾಗಿ ಅಡಿಂಜೆಯ ಅಡ್ಡೆಯ ಮೇಲೆ ಅನಿರೀಕ್ಷಿತ ದಾಳಿ ನಡೆಸಿದೆ.

ದಾಳಿಯ ವೇಳೆ ಸ್ಥಳದಲ್ಲೇ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು ಮುದ್ರಿಸಲು ಬಳಸುತ್ತಿದ್ದ ಹೈಟೆಕ್ ಪ್ರಿಂಟಿಂಗ್ ಮತ್ತು ಮುದ್ರಣ ಯಂತ್ರಗಳು, ಸ್ಕ್ಯಾನರ್‌ಗಳು, ನಕಲಿ ನೋಟು ತಯಾರಿಕೆಗೆ ಬಳಸುವ ವಿಶೇಷ ಕಾಗದಗಳು ಹಾಗೂ ಬಣ್ಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಜಾಲವು ಕೇವಲ ಸ್ಥಳೀಯವಾಗಿ ಮಾತ್ರವಲ್ಲದೆ ಅಂತರರಾಜ್ಯ ಮಟ್ಟದಲ್ಲಿ ಹರಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ದಾಳಿಯ ವೇಳೆ ಪೊಲೀಸರು ಸ್ಥಳದಲ್ಲಿದ್ದ 7 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ನೆರೆಯ ಕೇರಳ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಗೆ ಸೇರಿದವರಾಗಿದ್ದಾರೆ. ಇವರು ತಾವೇ ಮುದ್ರಿಸುತ್ತಿದ್ದ ನಕಲಿ ನೋಟುಗಳನ್ನು ದಕ್ಷಿಣ ಕನ್ನಡ ಹಾಗೂ ಕೇರಳದ ಗಡಿ ಭಾಗದ ಸಣ್ಣ ಪುಟ್ಟ ವ್ಯಾಪಾರ ಕೇಂದ್ರಗಳು, ಪೆಟ್ರೋಲ್ ಬಂಕ್ ಹಾಗೂ ಸಂತೆಗಳಲ್ಲಿ ಚಲಾವಣೆ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಸದ್ಯ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ಜಾಲದ ಹಿಂದೆ ಬೇರೆ ಯಾರಾದರೂ ಪ್ರಭಾವಿ ವ್ಯಕ್ತಿಗಳು ಅಥವಾ ಜಾಗತಿಕ ಜಾಲಗಳು ಭಾಗಿಯಾಗಿವೆಯೇ ಎಂಬ ಬಗ್ಗೆ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More