ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ಸದನದಲ್ಲಿ ವಿಷಾದ ವ್ಯಕ್ತಪಡಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಕ್ಷಮೆಗೆ ಪ್ರತಿಪಕ್ಷ ಪಟ್ಟು

Updated on: Dec 17, 2025 | 1:30 PM

ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಅವರು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರೊಂದಿಗೆ ಚರ್ಚಿಸಿ ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹಣ ಬೇರೆಡೆಗೆ ವರ್ಗಾಯಿಸಿಲ್ಲ ಎಂದು ಸ್ಪಷ್ಟಪಡಿಸಿ, ಯಾವುದೇ ತಪ್ಪು ಉದ್ದೇಶವಿರಲಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ, ಡಿಸೆಂಬರ್ 17: ಗೃಹಲಕ್ಷ್ಮಿ ಯೋಜನೆ ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ತಪ್ಪು ಮಾಹಿತಿ ನೀಡಿ ವಿರೋಧ ಪಕ್ಷಗಳ ತೀವ್ರ ಟೀಕೆ, ವಿರೋಧಕ್ಕೆ ಗುರಿಯಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬುಧವಾರ ಸದನದಲ್ಲಿ ಸ್ಪಷ್ಟನೆ ನೀಡಿದರು. ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಒಪ್ಪಿಕೊಂಡ ಅವರು, ತನಗೆ ಜವಾಬ್ದಾರಿಯ ಅರಿವಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಮುಖ್ಯಮಂತ್ರಿಗಳು ಈಗಾಗಲೇ ಸದನದಲ್ಲಿ ಈ ವಿಷಯವನ್ನು ಆದಷ್ಟು ಶೀಘ್ರದಲ್ಲಿ ಪರಿಹರಿಸುವುದಾಗಿ ಹೇಳಿದ್ದಾರೆ. ಹಣವನ್ನು ಬೇರೆ ಕಡೆಗೆ ವರ್ಗಾಯಿಸಲಾಗಿಲ್ಲ ಅಥವಾ ಯಾವುದೇ ದುರುಪಯೋಗವಾಗಿಲ್ಲ ಎಂದು ಸಚಿವೆ ಸ್ಪಷ್ಟಪಡಿಸಿದರು. ಎರಡು ತಿಂಗಳ ಹಣ ಪಾವತಿಯಲ್ಲಿ ವ್ಯತ್ಯಯವಾಗಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸುವುದಾಗಿ ಅವರು ತಿಳಿಸಿದರು. ತಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಲಕ್ಷ್ಮೀ ಹೇಳಿದರು.

ಅಷ್ಟರಲ್ಲಿ ಅರವಿಂದ ಬೆಲ್ಲದ್ ಸೇರಿದಂತೆ ಪ್ರತಿಪಕ್ಷದ ನಾಯಕರು ಕ್ಷಮೆಗೆ ಆಗ್ರಹಿಸಿದರು. ಇದೇ ವೇಳೆ ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ