ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ವಿಶ್ವವಿಖ್ಯಾತ ಹಂಪಿ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸುತ್ತಿದ್ದಾಗ ಪಟಾಕಿ ಕಿಡಿಯಿಂದ ವೇದಿಕೆ ಮೇಲೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತು. ಇದು ಭಾರಿ ಆತಂಕ ಸೃಷ್ಟಿಸಿತು. ಆದರೆ, ಸ್ಥಳದಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಕ್ಷಿಪ್ರವಾಗಿ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿ, ದೊಡ್ಡ ಅನಾಹುತವನ್ನು ತಪ್ಪಿಸಿದರು. ಅವರ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ಹೊಸಪೇಟೆ ಫೆ.13: ವಿಶ್ವವಿಖ್ಯಾತ ಹಂಪಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯ ಮೇಲೆ ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲೇ ಪಟಾಕಿ ಕಿಡಿ ತಾಗಿ ವೇದಿಕೆಯ ಬಲಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಅದ್ಧೂರಿ ‘ಹಂಪಿ ಉತ್ಸವ’ಕ್ಕೆ ಚಾಲನೆ ನೀಡಲಾಗುತ್ತಿತ್ತು. ಮುಖ್ಯ ವೇದಿಕೆಯ ಮೇಲೆ ಮುಖ್ಯಮಂತ್ರಿಗಳು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡುತ್ತಿದ್ದರು. ಈ ವೇಳೆ ಸಿಡಿಸಿದ ಪಟಾಕಿಯ ಕಿಡಿಯೊಂದು ವೇದಿಕೆಯ ಪಕ್ಕಕ್ಕೆ ಸಿಡಿದು, ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು, ದಟ್ಟ ಹೊಗೆ ಆವರಿಸಿಕೊಂಡಿತು. ವೇದಿಕೆಯ ಸಮೀಪವೇ ಬೆಂಕಿ ಮತ್ತು ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಹಾಗೂ ಗಣ್ಯರು ಆತಂಕಗೊಂಡಿದ್ದಾರೆ. ಆದರೆ, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಸಕಾಲಕ್ಕೆ ಸಿಬ್ಬಂದಿ ಎಚ್ಚೆತ್ತಿದ್ದರಿಂದ ಸಂಭವಿಸಬಹುದಾದ ದೊಡ್ಡ ಅನಾಹುತವೊಂದು ತಪ್ಪಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ