WPLನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್

Updated on: Jan 14, 2026 | 7:48 AM

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 6ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 192 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಹರ್ಮನ್​ಪ್ರೀತ್ ಕೌರ್ (71) ಅಜೇಯ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 19.2 ಓವರ್​ಗಳಲ್ಲಿ 193 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹರ್ಮನ್​ಪ್ರೀತ್ ಕೌರ್ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ ಗಳೊಂದಿಗೆ ಅಜೇಯ 71 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಹರ್ಮನ್ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಧಿಕ ಅರ್ಧಶತಕ ಸಿಡಿಸಿದ ದಾಖಲೆ ಇದೀಗ ಹರ್ಮನ್​ಪ್ರೀತ್ ಕೌರ್ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ನ್ಯಾಟ್ ಸೀವರ್ ಬ್ರಂಟ್ ಹೆಸರಿನಲ್ಲಿತ್ತು.

ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿರುವ ಇಂಗ್ಲೆಂಡ್ ಆಟಗಾರ್ತಿ ನ್ಯಾಟ್ ಸೀವರ್ ಬ್ರಂಟ್ ಈವರೆಗೆ 31 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 9 ಅರ್ಧಶತಕ ಬಾರಿಸಿ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಧಿಕ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಹರ್ಮನ್​ಪ್ರೀತ್ ಕೌರ್ ಅಳಿಸಿ ಹಾಕಿದ್ದಾರೆ. ಮುಂಬೈ ಇಂಡಿಯನ್ಸ್ ಪರ 31 ಪಂದ್ಯಗಳನ್ನಾಡಿರುವ ಹರ್ಮನ್ ಒಟ್ಟು 10 ಅರ್ಧಶತಕ ಬಾರಿಸಿ WPL ನಲ್ಲಿ ಅತೀ ಹೆಚ್ಚು ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಈ ಅರ್ಧಶತಕದೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 1000+ ರನ್ ಕಲೆಹಾಕಿದ ಮೊದಲ ಭಾರತೀಯ ಬ್ಯಾಟರ್ ಹಾಗೂ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ನ್ಯಾಟ್ ಸೀವರ್ ಬ್ರಂಟ್ (1101). ಇದೀಗ 1016 ರನ್ ಗಳೊಂದಿಗೆ ಹರ್ಮನ್​ಪ್ರೀತ್ ಕೌರ್ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಗೆದ್ದು ಬೀಗಿದ ಮುಂಬೈ:

ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 6ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 192 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಹರ್ಮನ್​ಪ್ರೀತ್ ಕೌರ್ (71) ಅಜೇಯ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 19.2 ಓವರ್​ಗಳಲ್ಲಿ 193 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.