ಸಿಎಂ ಬದಲಾವಣೆಗೆ ಹೈಕಮಾಂಡ್ ಒಪ್ಪಿಲ್ಲ: ಬೆಳಗಾವಿ ಅಧಿವೇಶನ ಸಮಯದಲ್ಲೇ ಮತ್ತೆ ಯತೀಂದ್ರ ಹೇಳಿಕೆ
ಸಿಎಂ ಬದಲಾವಣೆ ಸದ್ಯಕ್ಕಿಲ್ಲ. ಡಿಸಿಎಂ ಡಿಕೆ ಶಿವಕುಮಾರ್ ಅವಕಾಶ ಕೇಳಿದ್ದರಾರದೂ,ನಾಯಕತ್ವ ಬದಲಾವಣೆ ಪರಿಸ್ಥಿತಿ ಸದ್ಯ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದೆ ಎಂದು ಕೆಲವು ದಿನಗಳ ಹಿಂದೆ ಹೇಳಿದ್ದ ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಇದೀಗ ಮತ್ತದೇ ರಾಗ ಎಳೆದಿದ್ದಾರೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲೇ ಅವರು, ಸಿಎಂ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಹೇಳಿದೆ ಎಂದಿದ್ದಾರೆ.
ಬೆಳಗಾವಿ, ಡಿಸೆಂಬರ್ 11: ಸಿಎಂ ಬದಲಾವಣೆಗೆ ಹೈಕಮಾಂಡ್ ಒಪ್ಪಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಗುರುವಾರ ಮತ್ತೆ ಸ್ಪಷ್ಟಪಡಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಪ್ರಸ್ತುತ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದ್ದಾರೆ. ಒಂದೆಡೆ, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಆದರೆ, ಯತೀಂದ್ರ ಮತ್ತೆ ಮತ್ತೆ ಹೇಳಿಕೆ ನೀಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

