ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಮಹತ್ವದ ಹೇಳಿಕೆ
ಹಿರಿಯೂರು ಉಪಚುನಾವಣೆ ಟಿಕೆಟ್ ಹಂಚಿಕೆ ಕುರಿತು ಜೆಡಿಎಸ್-ಬಿಜೆಪಿ ಮೈತ್ರಿಕೂಟದಲ್ಲಿ ಸ್ಪರ್ಧೆ ಏರ್ಪಟ್ಟಿದೆ. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಗೆಲುವೇ ಮುಖ್ಯ ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದು, ಮೈತ್ರಿ ಒಗ್ಗಟ್ಟಾಗಿ ಮುನ್ನಡೆಯಲು ಅಮಿತ್ ಶಾ ಸಲಹೆ ನೀಡಿದ್ದಾರೆ.
ಬೆಂಗಳೂರು, ನವೆಂಬರ್ 20: ಹಿರಿಯೂರು ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ ಉಂಟಾಗಿರುವ ಚರ್ಚೆಯ ಮಧ್ಯೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ತಾವು ಯಾವುದೇ ಪ್ರತಿಷ್ಠೆಗಾಗಿ ಭೇಟಿ ಮಾಡಿಲ್ಲ. ಬದಲಾಗಿ, ಅಮಿತ್ ಶಾ ಅವರೇ ಸಮಯ ನೀಡಿ ಮಾತುಕತೆಗೆ ಆಹ್ವಾನಿಸಿದ್ದರು ಎಂದು ಸ್ಪಷ್ಟಪಡಿಸಿದ್ದಾರೆ.
ಹಿರಿಯೂರಿನಲ್ಲಿರುವ ವಾಸ್ತವವನ್ನು ಅಮಿತ್ ಶಾ ಅವರಿಗೆ ವಿವರಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ವೈಯಕ್ತಿಕ ಪ್ರತಿಷ್ಠೆಗಿಂತ ಚುನಾವಣೆ ಗೆಲ್ಲುವುದು ಮುಖ್ಯ. ಎನ್‌ಡಿಎ ಅಭ್ಯರ್ಥಿಯ ಗೆಲುವು ಮುಖ್ಯವೇ ಹೊರತು, ಜೆಡಿಎಸ್ ಅಥವಾ ಬಿಜೆಪಿ ಅಭ್ಯರ್ಥಿ ಎಂಬುದು ಪ್ರಶ್ನೆಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಸಂಬಂಧ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಒಮ್ಮತದ ತೀರ್ಮಾನ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಅಮಿತ್ ಶಾ ಅವರು ಮೈತ್ರಿ ಒಗ್ಗಟ್ಟಾಗಿ ಮುನ್ನಡೆಯುವ ಕುರಿತು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಹೋಗಬೇಕು ಎಂಬುದು ಹೈಕಮಾಂಡ್‌ನ ಮನಸ್ಸಿನಲ್ಲಿದೆ. ಮೈತ್ರಿಯಲ್ಲಿ ಬಿರುಕು ಮೂಡಿಸಲು ಪ್ರಯತ್ನಿಸುವವರಿಗೆ ಯಶಸ್ಸು ಸಿಗುವುದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
