ಮಾಂಜಾ ದಾರಕ್ಕೆ ಹುಬ್ಬಳ್ಳಿಯಲ್ಲಿ ಮಹಿಳೆ ಬಲಿ ಬೆನ್ನಲ್ಲೇ ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್ ವಶ
ಧಾರವಾಡ ಸಿಟಿ ಬಸ್ ನಿಲ್ದಾಣದ ಬಳಿ ಪೊಲೀಸರು ದಾಳಿ ನಡೆಸಿ 500ಕ್ಕೂ ಹೆಚ್ಚು ನಿಷೇಧಿತ ಮಾಂಜಾ ದಾರ ರೋಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಮಾಂಜಾ ದಾರದಿಂದ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಜಿ. ಬೊರಸೆ ಅವರು ಮಾಂಜಾ ದಾರ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಹುಬ್ಬಳ್ಳಿ, ಅಕ್ಟೋಬರ್ 23: ಧಾರವಾಡ ಸಿಟಿ ಬಸ್ ನಿಲ್ದಾಣದ ವೃತ್ತದ ಬಳಿಯಿರುವ ಕೆಲವು ಅಂಗಡಿಗಳ ಮೇಲೆ ಪೊಲೀಸರು ಗುರುವಾರ ಅನಿರೀಕ್ಷಿತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ, 500ಕ್ಕೂ ಹೆಚ್ಚು ನಿಷೇಧಿತ ಮಾರಕ ಮಾಂಜಾ ದಾರದ ರೋಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಹಠಾತ್ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸಂಭವಿಸಿದ ದುರಂತದ ಬೆನ್ನಲ್ಲೇ ಅಧಿಕಾರಿಗಳು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ, ಅವರು ತೀವ್ರವಾಗಿ ಗಾಯಗೊಂಡಿದ್ದು, ನಂತರ ಮೃತಪಟ್ಟಿದ್ದರು. ಈ ಘಟನೆ ಅವಳಿ ನಗರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಜಿ. ಬೊರಸೆ ಅವರು ತಕ್ಷಣವೇ ಎಚ್ಚೆತ್ತುಕೊಂಡಿದ್ದರು. ಅವಳಿ ನಗರದಲ್ಲಿ ಮಾಂಜಾ ದಾರದ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದರು. ಈ ಆದೇಶದ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮಾರಕ ಮಾಂಜಾ ದಾರದ ಹಾವಳಿಗೆ ಕಡಿವಾಣ ಹಾಕಲು ಪೊಲೀಸರು ಈ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ನಿಷೇಧಿತ ವಸ್ತುಗಳ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
