ಹಳೇ ಹುಬ್ಬಳ್ಳಿ ಆಸಾರ ಓಣಿಯ ಪುಷ್ಕರಣಿ ವಿವಾದ: ಎಂಎಲ್‌ಸಿ ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿಯ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಾಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವ್ಯಾಪಕ ವಿವಾದ ಭುಗಿಲೆದ್ದಿದೆ. ಈ ರಸ್ತೆಯನ್ನು ತೆರವುಗೊಳಿಸಲು ಆಗ್ರಹಿಸಿ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ನಿಷೇಧಾಜ್ಞೆ ಹೇರಿದ್ದರೂ ಪ್ರತಿಭಟನೆ ಮುಂದುವರಿದಿದ್ದು, ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
ಹುಬ್ಬಳ್ಳಿ, ಆಗಸ್ಟ್ 22: ಹುಬ್ಬಳ್ಳಿಯ ಐತಿಹಾಸಿಕ ಭವಾನಿ ಶಂಕರ ದೇವಾಲಯದ ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಾಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಿವಾದ ಭುಗಿಲೆದ್ದಿದೆ. ಪುಷ್ಕರಣಿಯನ್ನೇ ಹಾಳುಮಾಡಿ ರಸ್ತೆ ನಿರ್ಮಿಸಲಾಗಿದೆ ಎಂದು ಆರೋಪಿಸಿರುವ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ನಾಯಕರು, ರಸ್ತೆ ತೆರವುಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಚೆನ್ನಪೇಟೆ ಗಾರ್ಡನ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಎಂಎಲ್‌ಸಿ ಪ್ರದೀಪ್ ಶೆಟ್ಟರ್, ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಬಿಜೆಪಿ ನಾಯಕರು ಮತ್ತು ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ಪುಷ್ಕರಣಿ ಕಲ್ಯಾಣ ಚಾಲುಕ್ಯರ ಕಾಲದ ದೇವಾಲಯದ ಆಸ್ತಿಯಾಗಿದ್ದು, ಇದನ್ನು ಸಂರಕ್ಷಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.
ಪ್ರತಿಭಟನಾಕಾರರು ರಸ್ತೆಯನ್ನು ಕಿತ್ತು ಹಾಕಲು ಮುಂದಾಗಿದ್ದರು. ಆದರೆ, ದಲಿತ ಹಾಗೂ ಮುಸ್ಲಿಂ ಸಂಘಟನೆಗಳು ರಸ್ತೆಯನ್ನು ತೆಗೆಯಲು ಬಿಡುವುದಿಲ್ಲ ಎಂದು ಹೇಳಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಭವಾನಿ ಶಂಕರ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿದ್ದು, ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
