RCB vs GT: ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್

RCB vs GT: ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್

Updated on: May 26, 2026 | 11:29 PM

Rajat Patidar Breaks World Record: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ರಜತ್ ಪಾಟಿದಾರ್ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್ ವಿರುದ್ಧ 33 ಎಸೆತಗಳಲ್ಲಿ ಅಜೇಯ 93 ರನ್ ಗಳಿಸಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 9 ಸಿಕ್ಸರ್ ಸಹಿತ ಈ ಇನ್ನಿಂಗ್ಸ್, ಟಿ20 ಕ್ರಿಕೆಟ್‌ನಲ್ಲಿ ನಾಯಕನಾಗಿ ಒಂದೇ ಟೂರ್ನಮೆಂಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ವಿಶ್ವದಾಖಲೆ ಮುರಿಯಿತು. ಅವರು 41 ಸಿಕ್ಸರ್‌ಗಳೊಂದಿಗೆ ರಿಯಾನ್ ಪರಾಗ್ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಐಪಿಎಲ್ 2026 ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್, ಸಿಡಿಲಬ್ಬರದ ಇನ್ನಿಂಗ್ಸ್ ಆಡಿದರು. ನಿರ್ಣಾಯಕ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದರ್, 33 ಎಸೆತಗಳಲ್ಲಿ 283.82 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ 9 ಸಿಕ್ಸರ್ ಮತ್ತು 5 ಬೌಂಡರಿಗಳೊಂದಿಗೆ ಅಜೇಯ 93 ರನ್ ಗಳಿಸಿದರು. ರಜತ್ ಶತಕ ಬಾರಿಸುವ ಅವಕಾಶದಿಂದ ವಂಚಿತರಾದರೂ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆಯೊಂದನ್ನು ಮುರಿದಿದ್ದಾರೆ.

ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಬರೋಬ್ಬರಿ 9 ಸಿಕ್ಸರ್​ಗಳನ್ನು ಬಾರಿಸಿದ ರಜತ್, ಟಿ20 ಟೂರ್ನಮೆಂಟ್‌ವೊಂದರನ್ನು ಅತಿ ಹೆಚ್ಚು ಸಿಕ್ಸರ್​ಗಳನ್ನು ಬಾರಿಸಿದ ನಾಯಕರ ಪಟ್ಟಿಯಲ್ಲಿ ರಿಯಾನ್ ಪರಾಗ್ ಅವರ ದಾಖಲೆ ಮುರಿದು ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಐಪಿಎಲ್‌ನಲ್ಲಿ ಇದುವರೆಗೆ 41 ಸಿಕ್ಸರ್​ಗಳನ್ನು ಬಾರಿಸಿರುವ ರಜತ್, 2023-24 ರ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಅಸ್ಸಾಂ ತಂಡದ ನಾಯಕನಾಗಿ 40 ಸಿಕ್ಸರ್​ಗಳನ್ನು ಬಾರಿಸಿದ್ದ ರಿಯಾನ್ ಪರಾಗ್ ಅವರ ದಾಖಲೆಯನ್ನು ಮುರಿದರು.

Loading...
Unable to load recommendations.
Follow Us
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More