ಶಸ್ತ್ರಚಿಕಿತ್ಸೆ ಮಾಡದೆ ನಿರ್ಲಕ್ಷ್ಯ, ಮಹಿಳೆ ಸಾವು: ಜಯದೇವ ಹೃದ್ರೋಗ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ

Edited By:

Updated on: Jul 14, 2026 | 9:12 AM

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವಿರುದ್ಧ ಗಂಭೀರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ತುರ್ತು ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿದ್ದ 65 ವರ್ಷದ ಮಹಿಳೆಗೆ ಸಮಯಕ್ಕೆ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ನೀಡದ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರು, ಜುಲೈ 14: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವಿರುದ್ಧ ವೈದ್ಯಕೀಯ ನಿರ್ಲಕ್ಷ್ಯದ ಗಂಭೀರ ಆರೋಪ ಕೇಳಿಬಂದಿದೆ. 65 ವರ್ಷದ ಮಾಯಮ್ಮ ಎಂಬ ಮಹಿಳೆಗೆ ತುರ್ತು ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೂ, ಸಮಯಕ್ಕೆ ಚಿಕಿತ್ಸೆ ನೀಡದೆ ವಿಳಂಬ ಮಾಡಿದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬಸ್ಥರ ಪ್ರಕಾರ, ಕಳೆದ ಶುಕ್ರವಾರ ಮಾಯಮ್ಮ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ಬಳಿಕ ತಕ್ಷಣ ಓಪನ್ ಹಾರ್ಟ್ ಸರ್ಜರಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿ, ಹೆಚ್ಚಿನ ಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಜಯದೇವ ಆಸ್ಪತ್ರೆಗೆ ದಾಖಲಾದ ನಂತರ ಸೋಮವಾರ ರಾತ್ರಿ ತನಕ ಸೂಕ್ತ ಚಿಕಿತ್ಸೆ ನೀಡಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿನ ಆಪರೇಷನ್ ಯೂನಿಟ್ ಬಳಕೆಯ ವಿಚಾರವಾಗಿ ಇಬ್ಬರು ವೈದ್ಯರ ನಡುವೆ ಉಂಟಾದ ಭಿನ್ನಾಭಿಪ್ರಾಯ ಮತ್ತು ಪೈಪೋಟಿಯ ಕಾರಣ ಶಸ್ತ್ರಚಿಕಿತ್ಸೆ ನಡೆಯಲಿಲ್ಲ ಎಂದು ಮೃತೆಯ ಪುತ್ರ ಹಾಗೂ ಸೊಸೆ ಆರೋಪಿಸಿದ್ದಾರೆ. ಈ ವಿಳಂಬವೇ ಮಾಯಮ್ಮ ಅವರ ಸಾವಿಗೆ ಕಾರಣವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಸೋಮವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಮಾಯಮ್ಮ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ತಾಯಿಗೆ ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡಿದ್ದರೆ ಜೀವ ಉಳಿಯುತ್ತಿತ್ತು ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜಯದೇವ ಆಸ್ಪತ್ರೆ ಆಡಳಿತ ಹಾಗೂ ವೈದ್ಯರ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ಜಯದೇವ ಆಸ್ಪತ್ರೆ ಆಡಳಿತ ಅಥವಾ ಸಂಬಂಧಪಟ್ಟ ವೈದ್ಯರಿಂದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us