ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ಕರಬುರಗಿ ಬಂದ್: ರೈತರಿಂದ ಸರ್ಕಾರಕ್ಕೆ ಖಡಕ್ ಎಚ್ಚರಿಕೆ
ಪ್ರವಾಹ, ಬೆಳೆ ಹಾನಿಯಿಂದ ಕಂಗೆಟ್ಟಿರುವ ಕಲಬುರಗಿ ರೈತರು ಪರಿಹಾರಕ್ಕೆ ಆಗ್ರಹಿಸಿ ಇಂದು ಕಲಬುರಗಿ ಬಂದ್ ನಡೆಸುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ಮುಚ್ಚಲಾಗಿದ್ದು, ಬೆಳಗ್ಗೆಯಿಂದಲೇ ರೈತರ ಹಾಗೂ ರೈತ ಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದೆ. ಬಿಗಿ ಭದ್ರತೆ ಕಲ್ಪಿಸಲಾಗಿದೆ. ತಕ್ಷಣವೇ ನೆರೆ ಪರಿಹಾರ ಬಿಡುಗಡೆ ಮಾಡಬೇಕೆಂದು ರೈತ ಸಂಘಟನೆಗಳು ಆಗ್ರಹಿಸಿವೆ.
ಕಲಬುರಗಿ, ಅಕ್ಟೋಬರ್ 13: ಒಂದೆಡೆ ಎಐಸಿಸಿ ಅಧ್ಯಕ್ಷ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದರೆ ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ, ಸಂಘದ ನಿಷೇಧಕ್ಕೆ ಆಗ್ರಹಿಸುತ್ತಿದ್ದಾರೆ. ಆದರೆ, ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಪ್ರವಾಹದಿಂದ ಸಂಕಷ್ಟಕ್ಕೀಡಾದ ರೈತರು ತಕ್ಷಣವೇ ನೆರೆ ಪರಿಹಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಇಂದು ಬಂದ್‌ಗೆ ಕರೆ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ತೀವ್ರ ಮಳೆ ಮತ್ತು ಪ್ರವಾಹದಿಂದ ಬೆಳೆಹಾನಿ ಉಂಟಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ತುರ್ತು ಪರಿಹಾರ ಕ್ರಮಕ್ಕೆ ಆಗ್ರಹಿಸಿ ಇಂದು ಜಂಟಿ ಹೋರಾಟ ಸಮಿತಿ ಕಲಬುರಗಿ ಬಂದ್‌ಗೆ ಕರೆ ನೀಡಿದೆ.
ಬೆಳಗ್ಗೆಯಿಂದಲೇ ಹೋರಾಟಗಾರರು ಕೇಂದ್ರ ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿ, ಬಸ್ ಸಂಚಾರವನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿದರು. ಹೋರಾಟಕ್ಕೆ ರೈತಪರ, ಕನ್ನಡಪರ ಹಾಗೂ ಸಾಮಾಜಿಕ ಸಂಘಟನೆಗಳಾದ 20ಕ್ಕೂ ಹೆಚ್ಚು ಸಂಘಸಂಸ್ಥೆಗಳು ಬೆಂಬಲ ಘೋಷಿಸಿವೆ.
ಹೋರಾಟಗಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ 25,000 ರೂ. ಪರಿಹಾರ ನೀಡಬೇಕು, ನದಿ ಪ್ರವಾಹದಿಂದ ಮುಳುಗಿದ ಗ್ರಾಮಗಳಿಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜಿಲ್ಲೆಗೆ 5,000 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಬೇಕು, ಜೊತೆಗೆ ರೈತರ ಸಾಲಮನ್ನಾ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.
ಹೋರಾಟದ ಹಿನ್ನೆಲೆ ಜಿಲ್ಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಗೂ ಅಡ್ಡಿಯಾಗಿದೆ. ಕಲಬುರಗಿ ಪೊಲೀಸ್ ಇಲಾಖೆಯು ಹೆಚ್ಚಿನ ಭದ್ರತೆ ಕೈಗೊಂಡಿದ್ದು, ಯಾವುದೇ ಅಶಾಂತಿ ಸಂಭವಿಸದಂತೆ ಎಚ್ಚರಿಕೆ ವಹಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
