ಕಲಬುರಗಿ: ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ ಮಾಡಿದವರ ಮೇಲೆ ಕ್ರಮಕ್ಕೆ ಅಶೋಕ್ ಆಗ್ರಹ

ಕಲಬುರಗಿ: ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ ಮಾಡಿದವರ ಮೇಲೆ ಕ್ರಮಕ್ಕೆ ಅಶೋಕ್ ಆಗ್ರಹ

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Ganapathi Sharma

Updated on: Jun 20, 2024 | 12:27 PM

ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ನೀರಿನ ಕೊರತೆಯ ನೆಪವೊಡ್ಡಿ ಶಸ್ತ್ರಚಿಕಿತ್ಸೆ ಸ್ಥಗಿತಗೊಳಿಸಿರುವುದರ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಭೇಟಿ ನೀಡಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಅವರು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಕಲಬುರಗಿ, ಜೂನ್ 20: ಜಯದೇವ ಆಸ್ಪತ್ರೆಯಲ್ಲಿ (Jayadeva Hospital) ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ (R Ashoka) ಗುರುವಾರ ಆಗ್ರಹಿಸಿದರು. ನೀರಿನ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆಯನ್ನು ಮೂಂದೂಡಿದ್ದ ವರದಿಯಿಂದ ಗರಂ ಆದ ಅವರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯಲ್ಲಿ ನೀರಿಲ್ಲ ಎಂದರೆ ಹೇಗೆ ಎಂದು ವೈದ್ಯರನ್ನು ಪ್ರಶ್ನಿಸಿದರು.

ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿನ ಅಧ್ವಾನದ ಬಗ್ಗೆ ‘ಟಿವಿ9’ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಅಶೋಕ್ ಆಸ್ಪತ್ರೆಗೆ ಬೇಟಿ ನೀಡಿದ್ದಾರೆ.

ತಕ್ಷಣವೇ ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುತ್ತೇನೆ. ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆಯುತ್ತೇನೆ. ಜೊತೆಗೆ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧದಲ್ಲಿ ಪ್ರಶ್ನೆ ಮಾಡುತ್ತೇನೆ ಎಂದು ಅಶೋಕ್ ಹೇಳಿದರು.

ಕಲಬುರಗಿಯ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನೀರಿನ ಕೊರತೆಯ ನೆಪವೊಡ್ಡಿ ಮೂರು ದಿನಗಳಿಂದ ಶಸ್ತ್ರಚಿಕಿತ್ಸೆಯನ್ನೇ ಸ್ಥಗಿತಗೊಳಿಸಲಾಗಿತ್ತು. ನೀರಿನ ಕೊರತೆಯ ಕಾರಣ ಅತೀ ತುರ್ತು ಎನ್ನಿಸುವಂಥ ಶಸ್ತ್ರಚಿಕಿತ್ಸೆ ಹೊರತುಪಡಿಸಿ ಸಂಪೂರ್ಣವಾಗಿ ಆಪರೇಷನ್ ಥಿಯೇಟರ್ ಬಂದ್ ಮಾಡಲಾಗಿತ್ತು.

ಇದನ್ನೂ ಓದಿ: ಕಲಬುರಗಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನೀರಿಗೆ ಬರ: ಆಪರೇಷನ್ ಥಿಯೇಟರ್ ಬಂದ್​

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತವರು ಜಿಲ್ಲೆಯಲ್ಲಿಯೇ ಈ ರೀತಿ ಆಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಪ್ರತಿಪಕ್ಷ ನಾಯಕರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ