ಸರ್ಕಾರದಿಂದ ಹೊರಬಿತ್ತು ಅಧಿಕೃತ ಆದೇಶ: RSS ಸೇರಿ ಇತರೆ ಸಂಘಟನೆಗಳಿಗೆ ಬಿತ್ತು ಮೂಗುದಾರ

Updated on: Oct 18, 2025 | 9:50 PM

ಆರ್​ ಎಸ್​​ಎಸ್​ ಸೇರಿದಂತೆ ಇತರೆ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯವಾಗಿದೆ. ಮೊನ್ನೆ ಸಚಿವ ಸಂಪುಟ ಸಭೆಯ ನಿರ್ಧಾರದಂತೆ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇಂದು (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದೆ.

ಬೆಂಗಳೂರು, (ಅಕ್ಟೋಬರ್ 18): ಆರ್​ ಎಸ್​​ಎಸ್​ ಸೇರಿದಂತೆ ಇತರೆ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯವಾಗಿದೆ. ಮೊನ್ನೆ ಸಚಿವ ಸಂಪುಟ ಸಭೆಯ ನಿರ್ಧಾರದಂತೆ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇಂದು (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ, ಉದ್ಯಾನವನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳಲ್ಲಿ ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಾರ್ವಜನಿಕ ರಸ್ತೆಗಳು, ಸರ್ಕಾರದ ಇತರೆ ಆಸ್ತಿ ಮತ್ತು ಸ್ಥಳಗಳಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಅಯುಕ್ತರು ಮತ್ತು ಪೊಲೀಸ್ ಅಧೀಕ್ಷಕರು ಸಂವಿಧಾನ ಬದ್ಧ ನಾಗರಿಕ ಹಕ್ಕುಗಳಿಗೆ ಚ್ಯುತಿ ಉಂಟಾಗದಂತೆ ಮಾರ್ಗಸೂಚಿ ಹೊರಡಿಸಬೇಕು. ಯಾವುದೇ ಚಟುವಟಿಕೆ ಸಾರ್ವಜನಿಕರಿಗೆ ಅನಾನುಕೂಲ ಮತ್ತು ಸಂಸ್ಥೆಗಳ ಮೂಲ ಧ್ಯೇಯಕ್ಕೆ ಧಕ್ಕೆ ಉಂಟಾಗುವುದಾದಲ್ಲಿ ಸಕ್ಷಮ ಪ್ರಾಧಿಕಾರಗಳು ಅನುಮತಿ ನಿರಾಕರಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಒಳಾಡಳಿತ ಇಲಾಖೆ ಸೂಚನೆ ನೀಡಿದೆ.