ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್! ಪ್ರತಿಕ್ರಿಯೆ ವಿಳಂಬಕ್ಕೆ ಅಸಮಾಧಾನ
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲು ಪದೇ ಪದೇ ಕಾಲಾವಕಾಶ ಕೇಳಿದ್ದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಕ್ಟೋಬರ್ 29, 2025 ರಿಂದಲೂ ಕಾಲಾವಕಾಶ ಕೋರುತ್ತಿರುವ ಸರ್ಕಾರದ ವಿಳಂಬ ನೀತಿಗೆ ಎರಡು ಸಾವಿರ ರೂಪಾಯಿ ದಂಡ ವಿಧಿಸಿ, ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿದೆ.
ಬೆಂಗಳೂರು, ಅಕ್ಟೋಬರ್ 7: ಕರ್ನಾಟಕ ಹೈಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ 2000 ರೂಪಾಯಿ ದಂಡ ವಿಧಿಸಲಾಗಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಪ್ರತಿಕ್ರಿಯಿಸಲು ಪದೇ ಪದೇ ಕಾಲಾವಕಾಶ ಕೋರಿ ವಿಳಂಬ ನೀತಿ ಅನುಸರಿಸಿದ್ದಕ್ಕೆ ಹೈಕೋರ್ಟ್ ಈ ದಂಡ ವಿಧಿಸಿದೆ. ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪಿಸಿ ಜಮಖಂಡಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಸಂದರ್ಭದಲ್ಲಿ ಈ ಆದೇಶ ಹೊರಬಿದ್ದಿದೆ. ಅಕ್ಟೋಬರ್ 29, 2025 ರಿಂದಲೂ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಕಾಲಾವಕಾಶ ಕೇಳುತ್ತಿರುವುದು ಹೈಕೋರ್ಟ್ ಅಸಮಾಧಾನಕ್ಕೆ ಕಾರಣವಾಗಿದೆ. ‘‘ಸುಮಾರು ಒಂದು ವರ್ಷದಿಂದಲೂ ಈ ವಿಳಂಬ ನೀತಿ ಮುಂದುವರಿದಿದೆ’’ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರಕ್ಕೆ ದಂಡ ವಿಧಿಸಿದ ನ್ಯಾಯಾಲಯ, ಮುಂದಿನ ಎರಡು ವಾರಗಳಲ್ಲಿ ಯಾವುದೇ ವಿಳಂಬವಿಲ್ಲದೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ತಾಕೀತು ಮಾಡಿದೆ.
ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂಪಾಯಿ, ವಿರೋಧ ಪಕ್ಷದ ಶಾಸಕರಿಗೆ 25 ಕೋಟಿ ರೂಪಾಯಿ ಅನುದಾನ ನೀಡಿ ತಾರತಮ್ಯ ಮಾಡಲಾಗಿದೆ ಎಂದು ಪಿಐಎಲ್‌ನಲ್ಲಿ ಆರೋಪಿಸಲಾಗಿತ್ತು. ಅನುದಾನ ಹಂಚಿಕೆಯಲ್ಲಿನ ಸರ್ಕಾರದ ತಾರತಮ್ಯ ನೀತಿಯನ್ನು ಪ್ರಶ್ನಿಸಿದ್ದ ಈ ಅರ್ಜಿಗೆ ಸಮರ್ಪಕ ಪ್ರತಿಕ್ರಿಯೆ ನೀಡುವಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ಹೈಕೋರ್ಟ್ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ನ್ಯಾಯಾಲಯದ ಆದೇಶ ಪಾಲಿಸುವಂತೆ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

