ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ಟಿಪ್ಪರ್‌ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಚಾಲಕ ಸಾವು, 12 ಜನರಿಗೆ ಗಾಯ
ಬೆಳಗಾವಿ ಜಿಲ್ಲೆಯ ಸಂಕೇಶ್ವರ ಬಳಿ ನಡೆದ ಭೀಕರ ಅಪಘಾತದಲ್ಲಿ KSRTC ಬಸ್ ಟಿಪ್ಪರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಗಂಗಾವತಿಯಿಂದ ಕೊಲ್ಹಾಪುರಕ್ಕೆ ಸಂಚರಿಸುತ್ತಿದ್ದ ಬಸ್‌ನ ಚಾಲಕ ಸಂಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಬೆಳಗಾವಿ, ಅಕ್ಟೋಬರ್ 9: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ ಟಿಪ್ಪರ್‌ಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಈ ದುರ್ಘಟನೆಯಲ್ಲಿ ಬಸ್ ಚಾಲಕ ಸಂಗಪ್ಪ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಬಸ್‌ನಲ್ಲಿದ್ದ 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸಂಕೇಶ್ವರ ಮತ್ತು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಗಾವತಿಯಿಂದ ಕೊಲ್ಹಾಪುರಕ್ಕೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್, ಏಕಾಏಕಿ ರಸ್ತೆಯಲ್ಲಿ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಯನ್ನು ಸಾರುತ್ತಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆಗೆ ಟಿಪ್ಪರ್ ಚಾಲಕನ ನಿರ್ಲಕ್ಷ್ಯ ಕಾರಣವೇ ಅಥವಾ ಬಸ್ ಚಾಲಕನ ಅತಿ ವೇಗವೇ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
