ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು

Edited By:

Updated on: Jul 06, 2026 | 11:46 AM

ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಾಯಕರು ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದಾರೆ. ಮನೆ ಮನೆಗೆ ತೆರಳಿ ಮಾಡುವ ಬದಲು ಸಾಮೂಹಿಕವಾಗಿ ಎಸ್ಐಆರ್ ನಡೆಸಲಾಗುತ್ತಿದ್ದು, ನಕಲಿ ದಾಖಲೆ ಸೃಷ್ಟಿಸಿ ಅನರ್ಹರನ್ನು ಸೇರಿಸಲು ಬಿಎಲ್ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಈ ಕುರಿತು ಮೈತ್ರಿ ನಾಯಕರು ಮುಖ್ಯ ಚುನಾವಣಾ ಅಧಿಕಾರಿಗೆ ಸೋಮವಾರ ದೂರು ಸಲ್ಲಿಸಿದ್ದಾರೆ. ಎಸ್ಐಆರ್ ಪ್ರಕ್ರಿಯೆಯು ಆಯೋಗದ ಮಾರ್ಗಸೂಚಿಗಳ ಪ್ರಕಾರ ನಡೆಯುತ್ತಿಲ್ಲ ಎಂದು ವಿಪಕ್ಷಗಳು ಹೇಳಿವೆ.

ಮನೆ ಮನೆಗೆ ತೆರಳಿ ಮಾಡಬೇಕಾದ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಹಲವೆಡೆ ಸಾಮೂಹಿಕವಾಗಿ, ಮಸೀದಿಗಳು ಮತ್ತು ಚೌಲ್ಟ್ರಿಗಳಂತಹ ಸ್ಥಳಗಳಲ್ಲಿ ನಡೆಸಲಾಗುತ್ತಿದೆ. ಅನರ್ಹರನ್ನು ಮತದಾರರ ಪಟ್ಟಿಗೆ ಸೇರಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆರೋಪಿಸಿದ್ದಾರೆ. ರಾಮನಗರ, ಯಶವಂತಪುರ, ಜಯನಗರ, ಇಂಡಿ, ಕುಣಿಗಲ್, ಪಾವಗಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಈ ಲೋಪಗಳು ಕಂಡುಬಂದಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಾಮೂಹಿಕವಾಗಿ ನಡೆಸಿದ ಎಸ್ಐಆರ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿ, ಹೊಸದಾಗಿ ಪಾರದರ್ಶಕವಾಗಿ ಪ್ರಕ್ರಿಯೆ ನಡೆಸಬೇಕು ಮತ್ತು ಅಗತ್ಯವಿದ್ದರೆ ಹೊರರಾಜ್ಯಗಳ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ವಿಪಕ್ಷಗಳು ಮನವಿ ಮಾಡಿವೆ. ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಎಂಎಲ್​ಸಿ ಸಿ.ಟಿ. ರವಿ, ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಬಿಜೆಪಿ-ಜೆಡಿಎಸ್ ನಿಯೋಗದಲ್ಲಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us