ಸಿದ್ದರಾಮಯ್ಯ ಚುನಾವಣೆಗೆ ನಿಲ್ಲಲ್ಲ ಎಂದಿರುವುದರಿಂದ ಕಾಂಗ್ರೆಸ್, ಅಹಿಂದಕ್ಕೆ ಮಾರಕ: ಕೆಎನ್ ರಾಜಣ್ಣ
ಸಿದ್ದರಾಮಯ್ಯ ಚುನಾವಣೆಗೆ ನಿಲ್ಲುವುದಿಲ್ಲ ಎಂಬ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅಹಿಂದ ವರ್ಗಗಳ ಸಂಘಟನೆಗೆ ಮಾರಕ ಎಂದು ಕೆ.ಎನ್. ರಾಜಣ್ಣ ಆತಂಕ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಯಿಂದ ಪಕ್ಷದ ಶಕ್ತಿ ಕುಗ್ಗುವ ಸಾಧ್ಯತೆ ಇರುವುದರಿಂದ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಂಥ ಹೇಳಿಕೆ ನೀಡದಂತೆ ಮನವಿ ಮಾಡಿಕೊಂಡಿದ್ದೆ ಎಂದೂ ಹೇಳಿದ್ದಾರೆ.
ಬೆಂಗಳೂರು, ನವೆಂಬರ್ 23: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸದಿರುವ ಬಗ್ಗೆ ನೀಡಿರುವ ಹೇಳಿಕೆಗೆ ಮಾಜಿ ಸಚಿವ ಕೆಎನ್ ರಾಜಣ್ಣ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಈ ನಿರ್ಧಾರವು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಅಹಿಂದ ವರ್ಗಗಳ ಸಂಘಟನೆಗೆ ಮಾರಕ. ಸಿದ್ದರಾಮಯ್ಯ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದಲ್ಲಿ ಅಹಿಂದ ವರ್ಗಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಶಕ್ತಿ ಕಡಿಮೆಯಾಗುವ ಸಾಧ್ಯತೆಯಿದೆ. ಈ ಕುರಿತು ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಭೇಟಿ ಮಾಡಿ, ಯಾವುದೇ ಕಾರಣಕ್ಕೂ ತಾವು ಚುನಾವಣೆಗೆ ನಿಲ್ಲುವುದಿಲ್ಲ ಎಂಬ ಮಾತನ್ನು ಪ್ರಸ್ತಾಪಿಸಬೇಡಿ ಎಂದು ಮನವಿ ಮಾಡಿದ್ದೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರಿಗೆ ಹೋಗಿದ್ದಾಗ, ಅಲ್ಲಿನ ಜನರು ಸ್ಪರ್ಧಿಸುವಂತೆ ಒತ್ತಾಯಿಸಿದಾಗ, ಅವರಿಗೆ ಸುಳ್ಳು ಹೇಳುವುದು ಬೇಡ ಎಂಬ ಕಾರಣಕ್ಕೆ ನಿಲ್ಲಲ್ಲ ಎಂದು ಹೇಳಿದ್ದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಎಂಬುದನ್ನೂ ರಾಜಣ್ಣ ಹೇಳಿದ್ದಾರೆ. ಪಕ್ಷದ ಹಿತದೃಷ್ಟಿ ಮತ್ತು ವರ್ಗಗಳ ಸಂಘಟನೆ ಹಿತದೃಷ್ಟಿಯಿಂದ, ಸಿದ್ದರಾಮಯ್ಯ ಅವರ ಈ ಹೇಳಿಕೆ ಸೂಕ್ತವಲ್ಲ ಎಂದು ರಾಜಣ್ಣ ಒತ್ತಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಯಾವುದೇ ಬೇಸರವಿಲ್ಲ, ಇದು ಅವರ ಮೊದಲಿನಿಂದಲೂ ಇರುವ ಅಭಿಪ್ರಾಯ ಎಂದು ರಾಜಣ್ಣ ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

