ಮನೆ ಒಳಗೇ ಲಗ್ಗೆ ಇಟ್ಟು ಜಗುಲಿಯಲ್ಲಿದ್ದ ನಾಯಿಯ ಹೊತ್ತೊಯ್ದ ಚಿರತೆ: ಸಿಸಿಟಿವಿ ವಿಡಿಯೋ ವೈರಲ್

Edited By:

Updated on: Feb 07, 2026 | 9:16 AM

ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ದಿಡುಪೆ ಗ್ರಾಮದ ಮನೆಯೊಂದಕ್ಕೆ ರಾತ್ರಿ ವೇಳೆ ಚಿರತೆ ನುಗ್ಗಿದ್ದು, ಸಾಕು ನಾಯಿಯನ್ನು ಎಳೆದೊಯ್ದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಈಗ ವೈರಲ್ ಆಗುತ್ತಿದೆ. ಘಟನೆ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಮಂಗಳೂರು, ಫೆಬ್ರವರಿ 7: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಗ್ರಾಮದ ಕೊಂಡಾಳು ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ನಾರಾಯಣ ಗೌಡ ಎಂಬವರ ಮನೆಯ ಹೊರ ಜಗುಲಿಯಲ್ಲಿ ಮಲಗಿದ್ದ ನಾಯಿಯನ್ನು ರಾತ್ರಿ ವೇಳೆ ಚಿರತೆ ಹೊಂಚು ಹಾಕಿ ಕಚ್ಚಿ ಎಳೆದೊಯ್ದಿದೆ. ಚಿರತೆ ಮನೆಯಂಗಳಕ್ಕೆ ನುಗ್ಗಿದ ವೇಳೆ ಅಲ್ಲೇ ಮಲಗಿದ್ದ ಬೆಕ್ಕು ಅದೃಷ್ಟವಶಾತ್ ಚಿರತೆಯ ಬಾಯಿಂದ ತಪ್ಪಿಸಿಕೊಂಡಿದೆ. ನಾಯಿಯನ್ನು ಹೊತ್ತೊಯ್ದ ದೃಶ್ಯ ಮನೆಯ ಮುಂಭಾಗ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.

ಈ ಘಟನೆ ಬಳಿಕ ದಿಡುಪೆ ಗ್ರಾಮಸ್ಥರಲ್ಲಿ ಭೀತಿ ಮನೆ ಮಾಡಿದ್ದು, ರಾತ್ರಿ ವೇಳೆ ಮನೆ ಹೊರಗೆ ಹೋಗಲು ಜನರು ಹೆದರುತ್ತಿದ್ದಾರೆ. ಈ ಹಿಂದೆ ಸಹ ದಿಡುಪೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕು ಪ್ರಾಣಿಗಳನ್ನು ಚಿರತೆ ಹೊತ್ತೊಯ್ದ ಘಟನೆಗಳು ನಡೆದಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಚಿರತೆಯ ಸಂಚರಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಪ್ರಾಣಿಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More