ಲಿಂಗನಮಕ್ಕಿ ಜಲಾಶಯದಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ
ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಕನಿಷ್ಠ ಮಟ್ಟದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಕೆಪಿಟಿಸಿಎಲ್ ಮತ್ತು ಕೆಪಿಸಿಎಲ್ ಈ ನಿರ್ಧಾರ ಕೈಗೊಂಡಿವೆ. ಇದು ರಾಜ್ಯದ ವಿದ್ಯುತ್ ಪೂರೈಕೆ ಮೇಲೆ ಪರಿಣಾಮ ಬೀರಲಿದೆ.
ಶಿವಮೊಗ್ಗ, ಜೂನ್ 27: ರಾಜ್ಯದ ಪ್ರಮುಖ ಜಲವಿದ್ಯುತ್ ಮೂಲಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಬಳಿಯಿರುವ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿಯಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ವಿದ್ಯುತ್ ತಯಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ 1,745.75 ಅಡಿಗೆ ತಲುಪಿದೆ. ಸಾಮಾನ್ಯವಾಗಿ ಜಲಾಶಯದಲ್ಲಿ 1,743 ಅಡಿಗಳವರೆಗೆ ಯಾವುದೇ ತೊಂದರೆಯಿಲ್ಲದೆ ವಿದ್ಯುತ್ ಉತ್ಪಾದನೆ ಮಾಡಬಹುದು. ಆದರೆ, ಸದ್ಯದ ಮಟ್ಟ ಕನಿಷ್ಠ ಮಟ್ಟಕ್ಕೆ ಅತ್ಯಂತ ಹತ್ತಿರದಲ್ಲಿದೆ.
ನೀರಿನ ಸಂಗ್ರಹ ತೀರಾ ಕನಿಷ್ಠ ಮಟ್ಟಕ್ಕೆ ತಲುಪಿದಾಗ ವಿದ್ಯುತ್ ಉತ್ಪಾದನೆ ಮುಂದುವರಿಸಿದರೆ ಯಂತ್ರಗಳಲ್ಲಿ ಗಂಭೀರ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ತಾಂತ್ರಿಕ ದೋಷಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಹಾಗೂ ಕೆಪಿಸಿಎಲ್ ಅಧಿಕಾರಿಗಳು ವಿದ್ಯುತ್ ಉತ್ಪಾದನೆಯನ್ನು ಸದ್ಯಕ್ಕೆ ನಿಲ್ಲಿಸಲು ನಿರ್ಧರಿಸಿದ್ದಾರೆ.
ದಿನಕ್ಕೆ 55 ಮೆಗಾವ್ಯಾಟ್ ನಷ್ಟ
ಲಿಂಗನಮಕ್ಕಿ ವಿದ್ಯುತ್ ಉತ್ಪಾದನಾ ಕೇಂದ್ರದಿಂದ ಪ್ರತಿದಿನ ಸರಾಸರಿ 55 ಮೆಗಾವ್ಯಾಟ್ (MW) ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿತ್ತು. ಮುಂಗಾರು ಮಳೆ ಕ್ಷೀಣಿಸಿರುವುದರಿಂದ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಕಡಿಮೆಯಾಗಿದ್ದು, ಮಳೆ ಚುರುಕಾಗಿ ನೀರಿನ ಮಟ್ಟ ಏರಿಕೆಯಾಗುವವರೆಗೂ ವಿದ್ಯುತ್ ಉತ್ಪಾದನೆ ಪುನಾರಂಭಗೊಳ್ಳುವುದು ಕಷ್ಟಸಾಧ್ಯ ಎನ್ನಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ