ಮನೀಶ್ ಪಾಂಡೆ ಮಿಂಚಿಂಗ್: ಮೈಸೂರು ವಾರಿಯರ್ಸ್​ಗೆ ಭರ್ಜರಿ ಜಯ

Updated on: Aug 12, 2025 | 7:27 AM

Bengaluru Blasters vs Mysore Warriors: 181 ರನ್​ಗಳ ಗುರಿ ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ಪರ ನಾಯಕ ಮಯಾಂಕ್ ಅಗರ್ವಾಲ್ 49 ಎಸೆತಗಳಲ್ಲಿ 66 ರನ್ ಬಾರಿಸಿದರೂ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಬೆಂಗಳೂರು ಬ್ಲಾಸ್ಟರ್ಸ್ ತಂಡವು 19.2 ಓವರ್​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 39 ರನ್​ಗಳ ಜಯ ಸಾಧಿಸಿದೆ.

ಮಹಾರಾಜ ಟೂರ್ನಿಯ 2ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್​ ವಿರುದ್ಧ ಮೈಸೂರು ವಾರಿಯರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮನೀಶ್ ಪಾಂಡೆ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ವಾರಿಯರ್ಸ್ ಪಡೆಯು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ಅಜಿತ್ ಕಾರ್ತಿಕ್ (13) ಹಾಗೂ ಕಾರ್ತಿಕ್ ಎಸ್ (3) ಬೇಗನೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ವೆಂಕಟೇಶ್ 12 ರನ್​ಗಳಿಸಲಷ್ಟೇ ಶಕ್ತರಾದರು. ಈ ಹಂತದಲ್ಲಿ ಜೊತೆಗೂಡಿದ ಹರ್ಷಿಲ್ ಹಾಗೂ ಮನೀಶ್ ಪಾಂಡೆ ಮೈಸೂರು ವಾರಿಯರ್ಸ್ ತಂಡಕ್ಕೆ ಆಸರೆಯಾಗಿ ನಿಂತರು. ಇದರ ನಡುವೆ ಹರ್ಷಿಲ್ 31 ಎಸೆತಗಳಲ್ಲಿ 38 ರನ್​ಗಳಿಸಿ ಔಟಾದರು.

ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಮನೀಶ್ ಪಾಂಡೆ 29 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 58 ರನ್ ಬಾರಿಸಿದರು. ಇನ್ನು ಪಾಂಡೆಗೆ ಉತ್ತಮ ಸಾಥ್ ನೀಡಿದ ವಿಕೆಟ್ ಕೀಪರ್ ಬ್ಯಾಟರ್ ಸುಮಿತ್ ಕುಮಾರ್ 28 ಎಸೆತಗಳಲ್ಲಿ 44 ರನ್​ ಗಳಿಸಿದರು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್​ ಕಲೆಹಾಕಿತು.

181 ರನ್​ಗಳ ಗುರಿ ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ಪರ ನಾಯಕ ಮಯಾಂಕ್ ಅಗರ್ವಾಲ್ 49 ಎಸೆತಗಳಲ್ಲಿ 66 ರನ್ ಬಾರಿಸಿದರೂ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಬೆಂಗಳೂರು ಬ್ಲಾಸ್ಟರ್ಸ್ ತಂಡವು 19.2 ಓವರ್​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 39 ರನ್​ಗಳ ಜಯ ಸಾಧಿಸಿದೆ.

Published on: Aug 12, 2025 07:27 AM
Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More