ಶಾಸಕ ಮುನಿರತ್ನಗೆ ಮತ್ತೊಂದು ಕಾನೂನು ಸಂಕಷ್ಟ: ಸಂತ್ರಸ್ತೆಯ ಗುರುತು ಬಹಿರಂಗ, ಬೆದರಿಕೆ ಆರೋಪ
ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಆರೋಪ ಅವರ ಮೇಲಿದೆ. ಈ ಹಿಂದೆ ಕಗ್ಗಲಿಪುರ ಠಾಣೆಗೆ ದೂರನ್ನ ನೀಡಿದ್ದ ಸಂತ್ರಸ್ತೆ, ಮುನಿರತ್ನ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕುಟುಂಬದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು, ನ.26: ಆರ್.ಆರ್.ನಗರ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ FIR ದಾಖಲಾಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಗಂಭೀರ ಆರೋಪ ಅವರ ಮೇಲಿದೆ. ಸಂತ್ರಸ್ತೆಯು ಈ ಹಿಂದೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ದೂರಿನ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆ ಸಂತ್ರಸ್ತೆಯ ಗುರುತು ತಿಳಿಯುವಂತೆ ಬಹಿರಂಗವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಸಂತ್ರಸ್ತೆಯ ಕುಟುಂಬದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿ, ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದೂ ದೂರಿನಲ್ಲಿ ನಮೂದಿಸಲಾಗಿದೆ. ಈ ಸಂಬಂಧ ಬಿಎನ್ಎಸ್ ಸೆಕ್ಷನ್ 72 ಮತ್ತು 351 ಕ್ಲಾಸ್ ಎರಡರ ಅಡಿಯಲ್ಲಿ ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹೊಸ FIR ನಿಂದ ಶಾಸಕ ಮುನಿರತ್ನ ಅವರು ಮತ್ತಷ್ಟು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರ್ವಜನಿಕವಾಗಿ ಸಂತ್ರಸ್ತರ ಗುರುತು ಬಹಿರಂಗಪಡಿಸುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಈ ಪ್ರಕರಣದ ತನಿಖೆ ಮುಂದುವರಿದಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

