VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
MI New York vs Texas Super Kings: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 2ನೇ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೆಕ್ಸಾಸ್ ಸೂಪರ್ ಕಿಂಗ್ಸ್ 185 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಎಂಐ ನ್ಯೂಯಾರ್ಕ್ ತಂಡವು 20 ಓವರ್ಗಳಲ್ಲಿ 182 ರನ್ಗಳಿಸಲಷ್ಟೇ ಶಕ್ತರಾದರು.
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 2ನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಅದರಲ್ಲೂ ಡುಪ್ಲೆಸಿಸ್ ಹಿಡಿದ ಈ ಸ್ಟನ್ನಿಂಗ್ ಕ್ಯಾಚ್ನಿಂದಾಗಿ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ ರೋಚಕ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 185 ರನ್ ಕಲೆಹಾಕಿತು.
ಈ ಕಠಿಣ ಗುರಿ ಬೆನ್ನತ್ತಿದ ಎಂಐ ನ್ಯೂಯಾರ್ಕ್ ತಂಡವು 13 ಓವರ್ಗಳಲ್ಲಿ 121 ರನ್ಗಳಿಸಿದ್ದರು. ಅದರಲ್ಲೂ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೈಕೆಲ್ ಬ್ರೇಸ್ವೆಲ್ 21 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಹಾಗೂ 3 ಫೋರ್ಗಳೊಂದಿಗೆ 38 ರನ್ ಬಾರಿಸಿ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದ್ದರು.
ಆದರೆ 14ನೇ ಓವರ್ನ 2ನೇ ಎಸೆತದಲ್ಲಿ ಮೈಕೆಲ್ ಬ್ರೇಸ್ವೆಲ್ ಭರ್ಜರಿ ಹೊಡೆತಕ್ಕೆ ಮುಂದಾದರು. ಚೆಂಡು ಮಿಡ್ ಆಫ್ ಮೂಲಕ ಬೌಂಡರಿಗೆ ಸಾಗಲಿದೆ ಎನ್ನುವಷ್ಟರಲ್ಲಿ ಚಿರತೆಯಿಂದ ಜಿಗಿದ ಫಾಫ್ ಡುಪ್ಲೆಸಿಸ್ ಒಂದೇ ಕೈಯಲ್ಲಿ ಚೆಂಡನ್ನು ಹಿಡಿದರು. ಈ ಅತ್ಯುತ್ತಮ ಕ್ಯಾಚ್ ಪರಿಣಾಮ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ಮತ್ತೆ ಪಂದ್ಯದ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಯಿತು.
ಅಂತಿಮವಾಗಿ ಎಂಐ ನ್ಯೂಯಾರ್ಕ್ ತಂಡವನ್ನು 20 ಓವರ್ಗಳಲ್ಲಿ 182 ರನ್ಗಳಿಗೆ ನಿಯಂತ್ರಿಸುವ ಮೂಲಕ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು 3 ರನ್ಗಳ ರೋಚಕ ಜಯ ಸಾಧಿಸಿದೆ.