ಎಲ್​ಪಿಜಿ ಪೂರೈಕೆ ವ್ಯತ್ಯಯ: ಬೆಂಗಳೂರು ಆಯ್ತು ಈಗ ಮೈಸೂರಲ್ಲೂ ಹೋಟೆಲ್ ಬಂದ್ ಆತಂಕ

Edited By:

Updated on: Mar 10, 2026 | 10:20 AM

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಮೈಸೂರು ಹೋಟೆಲ್‌ಗಳ ಮೇಲೆಯೂ ಆಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಹಾಗೂ ಮೂರು ಬಾರಿ ಬೆಲೆ ಏರಿಕೆಯಿಂದ ಹೋಟೆಲ್ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಉದ್ಯಮವನ್ನು ಬಂದ್ ಮಾಡುವುದಾಗಿ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹೇಳಿದ್ದಾರೆ.

ಮೈಸೂರು, ಮಾರ್ಚ್ 10: ಇರಾನ್-ಇಸ್ರೇಲ್ ಯುದ್ಧ ಜಾಗತಿಕವಾಗಿ ಸಮಸ್ಯೆಯನ್ನು ತಂದೊಡ್ಡಿದ್ದು, ಅದರ ಬಿಸಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಹೋಟೆಲ್ ಮಾಲೀಕರು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಹಿಂದೆ ಸುಲಭವಾಗಿ ಸಿಗುತ್ತಿದ್ದ ಸಿಲಿಂಡರ್‌ಗಳು ಈಗ ಆರ್ಡರ್ ಮಾಡಿ ಮೂರು ದಿನಗಳ ನಂತರವೂ ಸಿಗುತ್ತಿಲ್ಲ. ಇದರ ಜೊತೆಗೆ, ಮೂರು ಬಾರಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಇದು ಹೋಟೆಲ್ ಮಾಲೀಕರಿಗೆ ಗಂಭೀರ ಸಮಸ್ಯೆಯನ್ನು ಸೃಷ್ಟಿಸಿದೆ. ಬೆಲೆ ಏರಿಕೆಯನ್ನು ಗ್ರಾಹಕರಿಗೆ ವರ್ಗಾಯಿಸಿದರೆ, ಅವರು ಹೋಟೆಲ್‌ಗಳಿಂದ ವಿಮುಖರಾಗಬಹುದು ಎಂಬ ಆತಂಕ ಎದುರಾಗಿದೆ.

ಪೂರೈಕೆಯಲ್ಲಿ ಶೇಕಡಾ 50ರಷ್ಟು ಕಡಿತವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇನ್ನೆರಡು ಮೂರು ದಿನಗಳಲ್ಲಿ ಹೋಟೆಲ್ ಉದ್ಯಮ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಹೋಟೆಲ್ ಉದ್ಯಮವು ಸೇವಾ ವಲಯವಾಗಿದ್ದು, ಲಕ್ಷಾಂತರ ಗ್ರಾಹಕರು ಇದನ್ನು ಅವಲಂಬಿಸಿದ್ದಾರೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದರೆ, ಉದ್ಯಮವನ್ನು ಬಂದ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣ ಗೌಡ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More