ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ, ಸಿದ್ದರಾಮಯ್ಯ ಯಾಕೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಬೆನ್ನಿಗೆ ನಿಂತ ಜಿಟಿಡಿ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರಿಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಮೈಸೂರು ದಸರಾ ವೇದಿಕೆಯಲ್ಲೇ ಟಾಂಗ್ ನೀಡಿದರು. ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ, ಸಿದ್ದರಾಮಯ್ಯ ಯಾಕೆ ಕೊಡಬೇಕು ಎಂದು ಪ್ರಶ್ನಿಸಿದ ಅವರು, ತಮ್ಮದೇ ಜೆಡಿಎಸ್ಗೆ ಟಾಂಗ್ ಕೊಟ್ಟರು! ವಿಡಿಯೋ ಇಲ್ಲಿದೆ.
ಮೈಸೂರು, ಅಕ್ಟೋಬರ್ 3: ಅಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಇಂದು ಅದೇ ಕ್ಷೇತ್ರದಲ್ಲಿ ನಿಂತು ಸಿದ್ದುಗೆ ಬೆಂಬಲ ನೀಡಿದ್ದಾರೆ. ಅಷ್ಟೇ ಅಲ್ಲ, ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಲ್ಲದೆ, ಸ್ವಪಕ್ಷ ಜೆಡಿಎಸ್ಗೇ ಟಾಂಗ್ ನೀಡಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತರು. ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂದು ವಾದಿಸುತ್ತಾ ಹೋದರೆ ರಾಜ್ಯದಲ್ಲಿ ಎಲ್ಲ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾದೀತು. ಹಾಗೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿಯೇ ರಾಜೀನಾಮೆ ಕೊಟ್ಟಿಲ್ಲ: ಜಿಟಿಡಿ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅದೇ ರೀತಿ ಸಿದ್ದರಾಮಯ್ಯ ಸಹ ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು ಜಿ.ಟಿ.ದೇವೇಗೌಡ ಪ್ರತಿಪಾದಿಸಿದರು.
ಇದನ್ನೂ ಓದಿ: ಚುನಾಯಿತ ಸರ್ಕಾರ ಕಿತ್ತಾಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ: ದಸರಾ ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತು
ಈಗಾಗಲೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿದ್ದಾರಲ್ಲಾ? ಮುಡಾ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಎಲ್ಲದಕ್ಕೂ ಸಹ ಸಿಎಂ ಸಿದ್ದರಾಮಯ್ಯ ಕಾರಣ ಅಲ್ಲ. ಕಾನೂನುಬದ್ಧವಾಗಿ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡಲಾಗಿದೆ. ಎಫ್ಐಆರ್ ದಾಖಲಾದ ತಕ್ಷಣ ರಾಜೀನಾಮೆ ಅಗತ್ಯವಿಲ್ಲ ಎಂದು ಜಿಟಿ ದೇವೇಗೌಡ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ