ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು

Edited By:

Updated on: Nov 12, 2026 | 6:44 PM

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪದ ನಲ್ಲಿಗುಡ್ಡೆ ಕೆರೆ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುತ್ತಿದೆ. ₹10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ವಾಕಿಂಗ್, ಸೈಕ್ಲಿಂಗ್ ಪಾತ್ ಹಾಗೂ ಉದ್ಯಾನವನ ನಿರ್ಮಾಣವಾಗಲಿದೆ. ಈಗಾಗಲೇ ಜಲ ಕ್ರೀಡೆಗಳನ್ನೂ ಆರಂಭಿಸಲಾಗಿದ್ದು, ಈ ರಮಣೀಯ ತಾಣವು ಬೆಂಗಳೂರಿಗರಿಗೆ ಹೊಸ ವಾರಾಂತ್ಯದ ತಾಣವಾಗಿ ರೂಪುಗೊಳ್ಳುತ್ತಿದೆ.

ಬೆಂಗಳೂರು, ನವೆಂಬರ್ 12: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪದಲ್ಲಿರುವ ನಲ್ಲಿಗುಡ್ಡೆ ಕೆರೆಯು ಪ್ರವಾಸೋದ್ಯಮದ ನೂತನ ಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದಲ್ಲಿರುವ ಈ ಮನಮೋಹಕ ತಾಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿದೆ.

ಸುಮಾರು ನೂರು ಎಕರೆ ಪ್ರದೇಶದಲ್ಲಿ ಹಚ್ಚ ಹಸಿರಿನ ಬೆಟ್ಟಗುಡ್ಡಗಳ ನಡುವೆ ವ್ಯಾಪಿಸಿರುವ ಈ ಕೆರೆ, ತನ್ನ ನೈಸರ್ಗಿಕ ಸೌಂದರ್ಯದಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಹಿಂದೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಈ ಕೆರೆಗೆ ಈಗ ಮರುಜೀವ ನೀಡಲಾಗುತ್ತಿದೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಲ ಕ್ರೀಡೆಗಳನ್ನು (ವಾಟರ್ ಸ್ಪೋರ್ಟ್ಸ್ ಗೇಮ್ಸ್) ಆರಂಭಿಸಲಾಗಿದ್ದು, ಇದು ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಸೆಳೆಯುತ್ತಿದೆ.

ಕೆರೆಯ ಅಭಿವೃದ್ಧಿಗಾಗಿ GBDA ಮತ್ತು BMICP ವತಿಯಿಂದ ತಲಾ ಐದು ಕೋಟಿ ರೂಪಾಯಿಗಳಂತೆ ಒಟ್ಟು ₹10 ಕೋಟಿ ಅನುದಾನವನ್ನು ನೀಡಲಾಗಿದೆ. ಈ ನಿಧಿಯಡಿ ಕೆರೆಯ ಸುತ್ತಲೂ ಸೈಕ್ಲಿಂಗ್ ಪಾತ್, ವಾಕಿಂಗ್ ಪಾತ್ ಹಾಗೂ ಸುಂದರ ಉದ್ಯಾನವನವನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಸಿ. ಬಾಲಕೃಷ್ಣ ಅವರು ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ನಿವಾಸಿಗಳಿಗೆ, ನಗರದ ಜಂಜಾಟದಿಂದ ಹೊರಬಂದು ಸಮಯ ಕಳೆಯಲು ನಲ್ಲಿಗುಡ್ಡೆ ಕೆರೆ ಹೇಳಿ ಮಾಡಿಸಿದ ತಾಣವಾಗಲಿದೆ. ಈ ಅಭಿವೃದ್ಧಿ ಕಾರ್ಯಗಳು ಬಿಡದಿ ಪ್ರದೇಶದ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡಲಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More