ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಲು ಸಾಮರ್ಥ್ಯ ಇಲ್ಲ, ಅವರಿಗೆ ಹೋಲಿಕೆ ಇಲ್ಲ: ಪರಮೇಶ್ವರ್ ಅಚ್ಚರಿಯ ಹೇಳಿಕೆ
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ. ನವೆಂಬರ್‌ನಲ್ಲಿ ಡಿಸಿಎಂ ಮತ್ತು ಸಿಎಂ ದಿಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಶಿವಕುಮಾರ್ ಸಮರ್ಥ ನಾಯಕರಾಗಿದ್ದು ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದವರೆಲ್ಲರೂ ಬದ್ಧರಾಗಲಿದ್ದಾರೆ ಎಂದಿದ್ದಾರೆ.
ಬೆಂಗಳೂರು, ಅಕ್ಟೋಬರ್ 27: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಪೈಪೋಟಿ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ಜನ ಹೇಳಿದ ಮಾತ್ರಕ್ಕೆ ನಿರ್ಧಾರ ಆಗುವುದಿಲ್ಲ. ಹೈಕಮಾಂಡ್‌ನವರು ಸಂಪೂರ್ಣವಾಗಿ ವಿಶ್ಲೇಷಣೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಪ್ರಸ್ತುತ ಬಿಹಾರದಲ್ಲಿ ಚುನಾವಣೆ ನಡೆಯುತ್ತಿದ್ದು, ಅದು ಮುಗಿದ ನಂತರ ಸೂಕ್ತ ನಿರ್ಧಾರ ಪ್ರಕಟವಾಗಬಹುದು ಎಂದು ಅವರು ಹೇಳಿದ್ದಾರೆ. ಡಿಕೆ ಶಿವಕುಮಾರ್ ಒಬ್ಬ ಸಮರ್ಥ ನಾಯಕ ಮತ್ತು ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರ ಸಾಮರ್ಥ್ಯಕ್ಕೆ ಯಾರೂ ಹೋಲಿಕೆ ಇಲ್ಲ ಎಂದು ಪರಮೇಶ್ವರ್ ಶ್ಲಾಘಿಸಿದ್ದಾರೆ.
ನವೆಂಬರ್ 11ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿ ದೆಹಲಿಗೆ ತೆರಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ನವೆಂಬರ್ 15ರಂದು ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ.
