ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಆಂಧ್ರ ಬಸ್, ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವು
ಆಂಧ್ರ ಬಸ್, ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿ ಇನ್ನೋವಾ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಪಾವಗಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇನ್ನೋವಾ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರನ್ನು ಪಾವಗಡ ತಾಲೂಕಿನ ಐವಾರ್ಲಹಳ್ಳಿ ಗ್ರಾಮದ ರಾಜಶೇಖರ್ ರೆಡ್ಡಿ (40) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಪೆನುಕೊಂಡ ಕಡೆಯಿಂದ ಪಾವಗಡದತ್ತ ಬರುತ್ತಿದ್ದ ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಚಾಲಕ ರಾಜಶೇಖರ್ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಮಾಹಿತಿ ಪಡೆದ ಪಾವಗಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದ್ದು, ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



