ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ, ಕಾರು ಬಿಟ್ಟು ಸೈಕಲ್ ಏರಿದ ನಾಯಕರು!
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯದಾದ್ಯಂತ ಪ್ರತಿಭಟನೆ, ಸೈಕಲ್ ಜಾಥಾ ನಡೆಸಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ನಾಯಕರಾದ ಅಶ್ವತ್ಥನಾರಾಯಣ ಹಾಗೂ ಇತರರು ಸೈಕಲ್ ಏರಿದರು. ನಂತರ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಬೆಂಗಳೂರು, ಜೂನ್ 20: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ (Petrol, diesel price hike) ವಿರುದ್ಧ ಬಿಜೆಪಿ (BJP) ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸೈಕಲ್ ಜಾಥಾ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ನಾಯಕರು, ಕಾರ್ಯಕರ್ತರು ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಹಾಗೂ ಸೈಕಲ್ ಜಾಥಾ ಹಮ್ಮಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ವಿಜಯೇಂದ್ರ, ಅಶ್ವತ್ಥನಾರಾಯಣ ಹಾಗೂ ಇತರ ನಾಯಕರು ಕಾರು ಬಿಟ್ಟು ಸೈಕಲ್ ಏರಿ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಕಲಬುರಗಿಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ದಾವಣಗೆರೆಯಲ್ಲಿ ಮಾಜಿ ಸಿಎಂ, ಸಂಸದ ಬೊಮ್ಮಾಯಿ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ, ಮೈಸೂರಿನಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ನೇತೃತ್ವದಲ್ಲಿ, ಬೀದರ್ನಲ್ಲಿ ಮಾಜಿ ಸಚಿವ ಪ್ರಭು ಚೌಹಾಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಉಳಿದಂತೆ ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ರಾಯಚೂರು, ಮಂಡ್ಯ, ಮಂಗಳೂರು ಸೇರಿ ಹಲವೆಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ; ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಕರ್ನಾಟಕ ಸರ್ಕಾರ ಶನಿವಾರ ಕ್ರಮವಾಗಿ ಶೇ 3.9 ಹಾಗೂ ಶೇ 4.1 ರಷ್ಟು ಹೆಚ್ಚಳ ಮಾಡಿತ್ತು. ಇದರಿಂದ ಪೆಟ್ರೋಲ್ ಬೆಲೆ ಲೀಟರ್ಗೆ ಸುಮಾರ 3 ರೂ. ಹಾಗೂ ಡಿಸೇಲ್ ಬೆಲೆ ಸುಮಾರು 3.50 ರೂಪಾಯಿ ಹೆಚ್ಚಳವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ