ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ತಾವೇ ಕತಾರ್ ರಾಜನನ್ನು ಬರಮಾಡಿಕೊಂಡ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ದೆಹಲಿ ವಿಮಾನ ನಿಲ್ದಾಣದಲ್ಲಿ ಕತಾರ್ ರಾಜ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರನ್ನು ಬರಮಾಡಿಕೊಂಡಿದ್ದಾರೆ. ಇಬ್ಬರು ನಾಯಕರು ಆತ್ಮೀಯ ಅಪ್ಪುಗೆಯನ್ನು ವಿನಿಮಯ ಮಾಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಕತಾರ್ ಅಮೀರ್ ಅವರನ್ನು ಬರಮಾಡಿಕೊಳ್ಳಲು ಈ ವೇಳೆ ಆಗಮಿಸಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳನ್ನು ಒಳಗೊಂಡಂತೆ ಅವರು ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ನವದೆಹಲಿ: ಕತಾರ್ ರಾಜ್ಯದ ಎಮೀರ್ (ರಾಜ) ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ಮೂಲಕ ಪಿಎಂ ಮೋದಿ ಖುದ್ದು ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ಅಮೀರ್ ಅವರನ್ನು ಬರಮಾಡಿಕೊಂಡಿದ್ದಾರೆ. ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.
ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ಕತಾರ್ ರಾಜ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರು ನಾಳೆ (ಮಂಗಳವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ ಕತಾರ್ ಅಮೀರ್ ಭಾರತಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ. ಇದು ಕತಾರ್ ಅಮೀರ್ ಭಾರತಕ್ಕೆ ನೀಡುತ್ತಿರುವ ಎರಡನೇ ಭೇಟಿಯಾಗಿದೆ. ಅವರು ಈ ಹಿಂದೆ ಮಾರ್ಚ್ 2015ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ