ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್: ಚಾರ್ಜ್ಶೀಟ್ ವಿರುದ್ಧ ಜೆಡಿಎಸ್ ಶಾಸಕನ ಆಕ್ರೋಶ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ತನಿಖೆಯನ್ನು ದಿಕ್ಕು ತಪ್ಪಿಸಲು ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಭಾವಿಗಳ ಹೆಸರುಗಳನ್ನು ಕೈಬಿಟ್ಟಿರುವುದನ್ನು ಅವರು ಪ್ರಶ್ನಿಸಿದ್ದಾರೆ. ನ್ಯಾಯಸಮ್ಮತ ತನಿಖೆ ಹಾಗೂ ಪಕ್ಷದ ಕಾರ್ಯಕರ್ತರ ರಕ್ಷಣೆಗೆ ಕಾನೂನು ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಹಾಸನ, ಮಾರ್ಚ್ 20: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಹಾಸನದ ಜೆಡಿಎಸ್ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮವು ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸುವ ಯತ್ನ ಎಂದು ಅವರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಕೆಲ ಪ್ರಭಾವಿ ವ್ಯಕ್ತಿಗಳ ಹೆಸರುಗಳನ್ನು ಕೈಬಿಟ್ಟು, ಯಾವುದೇ ಸಂಬಂಧವಿಲ್ಲದ 10-12 ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಸಿಲುಕಿಸಲಾಗಿದೆ. ನಿಜವಾದ ಅಪರಾಧಿಗಳನ್ನು ಪತ್ತೆಹಚ್ಚುವ ಬದಲು, ಜೆಡಿಎಸ್ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿರುವುದನ್ನು ಖಂಡಿಸುತ್ತೇವೆ. ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಸರ್ಕಾರ ಹೊರತರಬೇಕು. ಈ ಸಂಬಂಧ ತಮ್ಮ ಪಕ್ಷದ ಕಾರ್ಯಕರ್ತರು ಧೃತಿಗೆಡಬಾರದು ಎಂದು ಮನವಿ ಮಾಡಿರುವ ಅವರು, ಕಾನೂನು ಹೋರಾಟಕ್ಕೆ ಸಿದ್ಧವಾಗಿರೋದಾಗಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
