ರಾಜ್ಯಪಾಲರ ಕ್ರಮ ಕಾನೂನು ಮತ್ತು ಸಂವಿಧಾನಬಾಹಿರ: ಯತೀಂದ್ರ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಕಾನೂನುಬಾಹಿರ ಕೆಲಸದಲ್ಲಿ ಭಾಗಿಯಾಗಿಲ್ಲ, ಹಾಗಾಗಿ ಅವರು ರಾಜೀನಾಮೆ ಸಲ್ಲಿಸುವ ಪ್ರಶ್ನೆ ಉದ್ಭವಿಸಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಯಾರೇ ಆದರೂ ಬಿಜೆಪಿ ನಾಯಕರು ರಾಜ್ಯಪಾಲರ ಮೂಲಕ ಅವರನ್ನು ಪದಚ್ಯುತಗೊಳಿಸುವ ಪ್ರಯತ್ನ ಮಾಡುವುದನ್ನು ಮುಂದುವರಿಸುತ್ತಾರೆ ಎಂದು ಯತೀಂದ್ರ ಹೇಳಿದರು.
ಮೈಸೂರು: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ವಿರೋಧಿಸಿ ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಯತೀಂದ್ರ, ರಾಜ್ಯಪಾಲರು ಕಾನೂನು ಮತ್ತು ಸಂವಿಧಾನಬಾಹಿರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಪಾಲರ ಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ರಾಷ್ಟ್ರಪತಿಯವರಿಗೆ ಮನವಿ ಮಾಡುತ್ತಾ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದೇವೆ ಎಂದು ಹೇಳಿದರು. ರಾಜ್ಯಪಾಲರ ಕ್ರಮ ಒಂದು ರಾಜಕೀಯ ಪ್ರೇರಿತ ಮತ್ತು ಒಂದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವಾಗಿದೆ, ರಾಜ್ಯಪಾಲರ ಕಚೇರಿಯನ್ನು ರಾಜ್ಯ ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದು ಯತೀಂದ್ರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಹೃದಯಾಘಾತದಿಂದ ಸಾವು