ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ: ಪುತ್ತೂರಿನಲ್ಲಿ ಕಾಂಗ್ರೆಸ್-ಬಿಜೆಪಿ ವಾಕ್ಸಮರ
ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ದಕ್ಷಿಣ ಕನ್ನಡದಲ್ಲಿ ರಾಜಕೀಯ ಸಮರ ತೀವ್ರಗೊಂಡಿದೆ. ಮುಸ್ಲಿಂ ಮತದಾರರನ್ನು ಪಟ್ಟಿಯಿಂದ ಕೈಬಿಡಲು ಬಿಜೆಪಿ ಲೆಟರ್‌ಹೆಡ್‌ನಲ್ಲಿ ಶಿಫಾರಸು ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. BLOಗಳ ವರದಿ ಆಧಾರದ ಮೇಲೆ ಅಂತಿಮ ನಿರ್ಧಾರ ಚುನಾವಣಾಧಿಕಾರಿಗಳಿಂದ ಆಗುತ್ತದೆ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.
ಮಂಗಳೂರು, ಅ.7: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ರಾಜಕೀಯ ಸಮರ ಶುರುವಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಮುಸ್ಲಿಂ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಬಿಜೆಪಿ ಲೆಟರ್‌ಹೆಡ್‌ನಲ್ಲಿ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಆರೋಪಿಸಿದೆ. ಬಿಎಲ್‌ಒ ಗಳು ವಾಸ್ತವ್ಯ ಇರುವವರನ್ನೂ ವಾಸ್ತವ್ಯ ಇಲ್ಲ ಎಂದು ವರದಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿಗೆ ದೂರು ನೀಡಿರುವ ಕಾಂಗ್ರೆಸ್, ಬಿಎಲ್‌ಒಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದೆ. ಆದರೆ, ಈ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಎಲ್‌ಒಗಳಿಗೆ ಅನುಮಾನ ವ್ಯಕ್ತಪಡಿಸುವ ಅಧಿಕಾರವಿದೆ. ಮತದಾರರು ವಾಸ್ತವ್ಯ ಇಲ್ಲದಿರುವುದು, ಮರಣ ಹೊಂದಿರುವಿಕೆ, ವಿದೇಶ ಪ್ರವಾಸ, ಅಥವಾ ಎರಡೆರಡು ಕಡೆ ಮತ ಹೊಂದಿರುವುದನ್ನು ಗಮನಿಸಿ ವರದಿ ಮಾಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಬಿಎಲ್‌ಒಗಳು ಬಿಜೆಪಿ ಕಾರ್ಯಕರ್ತರಾಗಿರುವುದರಿಂದ ಬಿಜೆಪಿ ಲೆಟರ್‌ಹೆಡ್ ಬಳಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಅಂತಿಮವಾಗಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ನಿರ್ಧಾರವನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ ನಂತರವೇ ಮಾಡುತ್ತಾರೆ ಎಂದು ಬಿಜೆಪಿ ಪ್ರತಿಪಾದಿಸಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
