ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಮತಗಳ್ಳತನ ಆಗಿತ್ತು ಎಂದು ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದರು. ನಂತರದಲ್ಲಿ, ಬೆಂಗಳೂರಿಗೆ ಬಂದು ಪ್ರತಿಭಟನೆ ನಡೆಸಲು ಅವರು ಉದ್ದೇಶಿಸಿದ್ದಾರೆ. ಇದೀಗ ಆ ಕುರಿತು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ರಾಹುಲ್ ಗಾಂಧಿ ಬಳಿ ಎಲ್ಲ ದಾಖಲೆಗಳಿವೆ ಎಂದಿದ್ದಾರೆ.
ಬೆಂಗಳೂರು, ಜುಲೈ 31: ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಮತಗಳ್ಳತನ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ ಬಳಿ ಎಲ್ಲ ದಾಖಲೆಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿ ಪ್ರತಿಭಟನೆ ಮಾಡಬೇಕೆಂದು ನಾವು ತೀರ್ಮಾನ ಮಾಡುತ್ತೇವೆ. ಕರ್ನಾಟಕದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಎಲ್ಲ ದಾಖಲೆ ಪಡೆದುಕೊಂಡಿದ್ದಾರೆ. ಮಹದೇವಪುರ, ರಾಜಾಜಿನಗರ ಕ್ಷೇತ್ರಗಳಲ್ಲೂ ಮತಗಳ್ಳತನ ಆಗಿದೆ. ಈ ಬಗ್ಗೆ ಪ್ರತಿಭಟನೆ ಬಳಿಕ ಚುನಾವಣಾ ಅಧಿಕಾರಿಗಳಿಗೆ ದೂರು ಕೊಡುತ್ತೇವೆ ಎಂದರು.