ಆರ್‌ಜಿ ಕರ್ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್; ಬಂಗಾಳ ಸರ್ಕಾರದ ವಿರುದ್ಧ ಆಕ್ರೋಶ
ಪಶ್ಚಿಮ ಬಂಗಾಳದ ಕೊಲ್ಕತ್ತಾದ ಆರ್‌ಜಿ ಕರ್ ಕಾಲೇಜಿನಲ್ಲಿ ಕಳೆದ ವರ್ಷ ನಡೆದ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಮಮತಾ ಬ್ಯಾನರ್ಜಿ ಸರ್ಕಾರದ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೃತ ಯುವತಿಯ ತಾಯಿ ಹೇಳಿದ್ದಾರೆ. ಈ ರ್ಯಾಲಿಯು ನಿಗದಿತ ಪ್ರತಿಭಟನಾ ಸ್ಥಳದಿಂದ ಹೊರಟು ಪಾರ್ಕ್ ಸ್ಟ್ರೀಟ್ ಕಡೆಗೆ ತಿರುಗಿದಾಗ ಅಶಾಂತಿ ಉಂಟಾಯಿತು. ಅಲ್ಲಿ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದರು.
ಕೊಲ್ಕತ್ತಾ, ಆಗಸ್ಟ್ 9: ಕಳೆದ ವರ್ಷ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಆರ್‌ಜಿ ಕರ್ ಕಾಲೇಜಿನ (RG Kar Hospital) ಟ್ರೈನಿ ವೈದ್ಯೆಯ ಸಾವನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಲಾಗಿತ್ತು. ಆಕೆಯ ಪೋಷಕರು ಮೆರವಣಿಗೆ ನಡೆಸುತ್ತಿದ್ದಂತೆ ಕೋಲ್ಕತ್ತಾದ ಹೃದಯಭಾಗದಲ್ಲಿ ಪೊಲೀಸರು ಪ್ರತಿಭಟನಾಕಾರರೊಂದಿಗೆ ಘರ್ಷಣೆ ನಡೆಸಿದರು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ನುಗ್ಗಲು ಪ್ರಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿ ಬಳೆಗಳನ್ನು ಮುರಿದಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದರು. ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಹಾಗೂ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಬಿಜೆಪಿ ಶಾಸಕರ ಮೇಲೆ ಲಾಠಿ ಪ್ರಹಾರ ನಡೆಸಲಾಯಿತು. ಇದರಲ್ಲಿ ಮೃತ ಯುವತಿಯ ಪೋಷಕರು ಗಾಯಗೊಂಡರು.
ಆಗಸ್ಟ್ 2024ರಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವೈದ್ಯೆಯ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿಯು ಅವರನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ದೃಢಪಡಿಸಿತು. ವ್ಯಾಪಕ ಪ್ರತಿಭಟನೆಗಳ ನಡುವೆ ಕೊಲ್ಕತ್ತಾ ಹೈಕೋರ್ಟ್ ನಂತರ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತು. ಈ ಪ್ರಕರಣವು ಕಾಲೇಜು ಪ್ರಾಂಶುಪಾಲರ ರಾಜೀನಾಮೆಗೆ ಕಾರಣವಾಯಿತು ಮತ್ತು ರಾಜ್ಯ ಸರ್ಕಾರದ ವಿರುದ್ಧ ಟೀಕೆಗೆ ಗುರಿಯಾಯಿತು. ಈ ವರ್ಷ ಜನವರಿಯಲ್ಲಿ ಸಂಜಯ್ ರಾಯ್ ಎಂಬಾತನನ್ನು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

