ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರದ ಸಿಇಟಿ ಪರೀಕ್ಷಾ ಕೇಂದ್ರವೊಂದರಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಸೂಚಿಸಿದ ಘಟನೆ ವಿವಾದ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ಬ್ರಾಹ್ಮಣರ ಮಹಾಸಭಾ ಸಿಡಿದೆದ್ದಿದೆ. ಇದರ ಬೆನ್ನಲ್ಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇನ್ನು ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಸರ್ಕಾರ ಚಿಂತನೆ ನಡೆಸಿದೆ.
ಬೆಂಗಳೂರು, (ಏಪ್ರಿಲ್ 30): ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (sacred thread) ತೆಗೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಈಗಾಗಲೇ ತಪಿಸ್ಥತರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಇನ್ನು ಜನಿವಾರವನ್ನು ಒತ್ತಾಯ ಪೂರ್ವಕವಾಗಿ ಕತ್ತರಿಸಿದ್ದರಿಂದ ಸರಿಯಾಗಿ ಪರೀಕ್ಷೆ ಬರೆದಿಲ್ಲ ಎಂದು ವಿದ್ಯಾರ್ಥಿಗಳು ನೋವು ತೋಡಿಕೊಂಡಿದ್ದು, ಈ ಸಂಬಂಧ ಮಕ್ಕಳ ಭವಿಷ್ಯದ ಬಗ್ಗೆ ಪೋಷಕರು ಸಹ ಆತಂಕ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಖುದ್ದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸುಳಿವು ಕೊಟ್ಟಿದ್ದಾರೆ.
ಇಂದು (ಏಪ್ರಿಲ್ 30) ಟಿವಿ9 ಜೊತೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಜನಿವಾರ ತೆಗೆದು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಸರ್ಕಾರ ಚಿಂತನೆ ನಡೆಸಿದ್ದು, ಇದಕ್ಕೆ ವಿದ್ಯಾರ್ಥಿಗಳು, ಪೋಷಕರು ಒಪ್ಪಿದ್ರೆ ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದು. ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿತ್ತು. ಚಿಕ್ಕಬಳ್ಳಾಪುರದಲ್ಲಿ ಓರ್ವ ವಿದ್ಯಾರ್ಥಿಯ ಜನಿವಾರ ತೆಗೆಸಲಾಗಿತ್ತು. ಹಾಗೇ ಚಿಕ್ಕಬಳ್ಳಾಪುರದ ಒಂದು ಕಾಲೇಜಿನಲ್ಲಿ ಹಿಜಾಬ್ಗೆ ಅವಕಾಶ ನೀಡಿರಲಿಲ್ಲ. ಇದರಿಂದ ಓರ್ವ ವಿದ್ಯಾರ್ಥಿನಿ ಸಿಇಟಿ ಭೌತಶಾಸ್ತ್ರ ವಿಷಯದ ಪರೀಕ್ಷೆ ಬರೆದಿರಲಿಲ್ಲ. ಹೀಗಾಗಿ ಈ ಎಲ್ಲಾ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Hindu Rituals: ಜನಿವಾರವನ್ನು ಎಲ್ಲೆಂದರಲ್ಲಿ ತೆಗೆಯಬಾರದು ಏಕೆ? ಯಜ್ಞೋಪವೀತ ಧಾರಣೆ ಮಹತ್ವ ಇಲ್ಲಿ ತಿಳಿಯಿರಿ
ಉದ್ದೇಶಪೂರ್ವಕವಾಗಿ ಜನಿವಾರ ತೆಗೆಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮತ್ತೊಂದು ಮರು ಪರೀಕ್ಷೆ ನೀಡಲು ಚಿಂತನೆ ನಡೆದಿದೆ. ಈ ಬಗ್ಗೆ ಪೋಷಕರ ಅಭಿಪ್ರಾಯ ಪಡೆದು ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
