ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸಕ್ಕೆ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು
ಶಿವಮೊಗ್ಗದಲ್ಲಿ ಬಿಜೆಪಿ-ಕಾಂಗ್ರೆಸ್ ರಾಜಕೀಯ ಸಮರ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿವಾಸ ಹಾಗೂ ಬಿಜೆಪಿ ಜಿಲ್ಲಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಅವಹೇಳನಕಾರಿ ಪೋಸ್ಟರ್ ಅಂಟಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಮುಖಂಡರು ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಶಿವಮೊಗ್ಗ, ನವೆಂಬರ್ 08: ಶಿವಮೊಗ್ಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಮರ ಮತ್ತಷ್ಟು ತಾರಕಕ್ಕೇರಿದೆ. ತಡರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿದ್ಯಾನಗರದ ನಿವಾಸ ಹಾಗೂ ದೀನ್ ದಯಾಳ್ ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗೆ ಅವಹೇಳನಕಾರಿ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಇದರಲ್ಲಿ ಬಿಜೆಪಿ ವಿರುದ್ಧ ಪ್ರಚೋದನಕಾರಿ ಘೋಷಣೆಗಳಿದ್ದು, ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಪಕ್ಷ ಹತಾಶಗೊಂಡು ಇಂತಹ ಕೃತ್ಯಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸ್ ಇಲಾಖೆ ಮೃದು ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಪೋಸ್ಟರ್ ಅಂಟಿಸಿದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಜಗದೀಶ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ದೊಡ್ಡಪೇಟೆ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಪೋಸ್ಟರ್ ಅಂಟಿಸಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಕಳೆದ 15-20 ದಿನಗಳಿಂದ ನಡೆಯುತ್ತಿರುವ ಕಾಂಗ್ರೆಸ್-ಬಿಜೆಪಿ ವಾಕ್ಸಮರ ಇದೀಗ ಪೋಸ್ಟರ್ ಸಮರದ ರೂಪ ಪಡೆದುಕೊಂಡಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

