ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಅಂದಾಜು ಒಂದು ವರ್ಷದ ಗಂಡು ಚಿರತೆ ಸೆರೆಯಾಗಿದೆ. ವಡ್ಡರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುರಿ, ಕರು, ನಾಯಿಗಳನ್ನು ಬೇಟೆಯಾಡಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ ಸಿಕ್ಕ ಹಿನ್ನೆಲೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ನಾಲ್ಕು ದಿನಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ಎರಡು ಚಿರತೆಗಳು ಸೆರೆಯಾಗಿದ್ದು, ಸೆರೆ ಸಿಕ್ಕ ಚಿರತೆಯನ್ನು ಅರಣ್ಯ ಇಲಾಖೆ ಬೇರೆಡೆಗೆ ಸ್ಥಳಾಂತರಿಸಿದೆ.